ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಆರೋಗ್ಯವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೇನೆ: ದೇವೇಗೌಡ

Last Updated 22 ಸೆಪ್ಟೆಂಬರ್ 2022, 12:56 IST
ಅಕ್ಷರ ಗಾತ್ರ

ಬೆಂಗಳೂರು: ‘ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ತಿಳಿಸಿದ್ದಾರೆ.

ತಮ್ಮ ಆರೋಗ್ಯದ ಸ್ಥಿತಿ ಕುರಿತು ಗುರುವಾರ ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿರುವ ಅವರು, ‘ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದರು. ಈ ಕಾರಣದಿಂದ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ’ ಎಂದು ಹೇಳಿದ್ದಾರೆ.

‘ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ’ ಎಂದು ಮನವಿ ಮಾಡಿದ್ದಾರೆ.

‘ಇನ್ನು ಕೆಲವು ದಿನಗಳ ನಂತರ ನಾನೇ ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುತ್ತೇನೆ. ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ’ ಎಂದು ತಿಳಿಸಿದ್ದಾರೆ.

‘ನನ್ನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕಂದಾಯ ಸಚಿವ ಆರ್‌. ಅಶೋಕ ಸೇರಿದಂತೆ ಎಲ್ಲ ಸಚಿವರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ. ಹಾಗೆಯೇ, ನನ್ನ ಆರೋಗ್ಯಕ್ಕಾಗಿ ನಾಡಿನ ದೇವಾಲಯಗಳಲ್ಲಿ ಪೂಜೆ, ಹರಕೆ ಮಾಡಿಕೊಂಡು ಅನ್ನದಾನ ಇತ್ಯಾದಿಗಳನ್ನು ಮಾಡಿದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ನನ್ನ ಹೃದಯ ತುಂಬಿ ಬಂದಿದೆ’ ಎಂದು ದೇವೇಗೌಡ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT