ಭಾನುವಾರ, ಸೆಪ್ಟೆಂಬರ್ 20, 2020
22 °C
ಕೇಂದ್ರಕ್ಕೆ 10 ಎಕರೆ ಜಮೀನು ನೀಡಲು ಶುಕ್ರವಾರದ ಸಭೆಯಲ್ಲಿ ತೀರ್ಮಾನ

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಶಾಸ್ತ್ರೀಯ ಅಧ್ಯಯನ ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯಕ್ಕೆ ಸೇರಿರುವ ಚಾಮುಂಡಿ ಬೆಟ್ಟದ ತಪ್ಪಲಿನ 10 ಎಕರೆ ಜಮೀನಿನಲ್ಲಿ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರದ ಕಟ್ಟಡ ನಿರ್ಮಿಸಲು ಸರ್ಕಾರ ತೀರ್ಮಾನಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

‘ಮುಂದಿನ ಒಂದು ತಿಂಗಳೊಳಗೆ ಕನ್ನಡ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಲು ಅಗತ್ಯ ಸಿದ್ಧತೆಗಳನ್ನು ಪ್ರಾರಂಭಿಸಬೇಕು. ಅಷ್ಟರಲ್ಲಿ ಜಮೀನು ಹಸ್ತಾಂತರ ಪ್ರಕ್ರಿಯೆಯೂ ಪೂರ್ಣಗೊಳಿಸಬೇಕು. ಇಲ್ಲದ ಸಲ್ಲದ ನೆಪಹೇಳಿಕೊಂಡು ತಡ ಮಾಡಿದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ’ ಎಂದೂ ರವಿ ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಿ ಹಲವು ವರ್ಷಗಳು ಕಳೆದರೂ ಶಾಶ್ವತ ಅಧ್ಯಯನ ಕೇಂದ್ರ ಆರಂಭ ಮಾಡದೇ ಇರುವುದು ಅತ್ಯಂತ ನೋವಿನ ಸಂಗತಿ ಎಂದೂ ಅವರು ವಿಷಾದ ವ್ಯಕ್ತಪಡಿಸಿದರು.

ಮೈಸೂರು ವಿಶ್ವವಿದ್ಯಾಲಯಕ್ಕೆ ಸೇರಿದ 3 ಎಕರೆ ಜಾಗದಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಲು ತೀರ್ಮಾನಿಸಲಾಗಿತ್ತು. ಆದರೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಲೋಕಶಿಕ್ಷಣ ಇಲಾಖೆಗೆ ನೀಡಿದ ಜಾಗವನ್ನು ರದ್ದುಪಡಿಸಿ ಉನ್ನತ ಶಿಕ್ಷಣ ಇಲಾಖೆಗೆ ಹಿಂತಿರುಗಿಸಿದೆ. ಈ ಜಾಗವನ್ನು ಕೌಶಲಾಭಿವೃದ್ಧಿ ಇಲಾಖೆಗೆ ನೀಡುವಂತೆ ಮೈಸೂರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವ ಕಾರಣ ತಡವಾಗಿದೆ. ಆದ್ದರಿಂದ, ಅಧ್ಯಯನ ಕೇಂದ್ರಕ್ಕೆ ಹೊರವಲಯದಲ್ಲಿ ಜಾಗ ನೀಡುವಂತೆ ಕೋರಿಕೆ ಸಲ್ಲಿಸಿದಾಗ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಜಾಗ ನೀಡಲು ಒಪ್ಪಿಕೊಂಡರು ಎಂದು ಸಚಿವ ಸಿ.ಟಿ.ರವಿ ತಿಳಿಸಿದರು.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ, ಮೈಸೂರು ವಿಶ್ವವಿದ್ಯಾಲಯದ ಟಿ.ವಿ.ವೆಂಕಟಾಚಲ ಶಾಸ್ತ್ರಿ, ಪ್ರೊ.ತಳವಾರ್, ಡಾ.ದುರ್ಗಾದಾಸ್‌, ಪ್ರೊ.ಎನ್‌.ಎಸ್‌.ತಾರಾನಾಥ್, ಸಿಐಐಎಲ್‌ನ ನಿರ್ದೇಶಕ ಡಾ. ಡಿ.ಜಿ.ರಾವ್‌ 
ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು