ಶನಿವಾರ, ಜುಲೈ 24, 2021
23 °C
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಳಿ ಸಮಗ್ರ ಮಾಹಿತಿ

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕ್ರಮ: ರವಿಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಇನ್ನು ಕೆಲವೇ ದಿನಗಳಲ್ಲಿ ವರಿಷ್ಠರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಅರುಣ್‌ಸಿಂಗ್ ಅವರು, ಯಾರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ? ಯಾರು ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ? ಎಂಬುದರ ಸಮಗ್ರ ಮಾಹಿತಿ ಪಡೆದುಕೊಂಡು ಹೋಗಿದ್ದಾರೆ ಎಂದರು.

ಯಾರು ಏನು ಮಾಡಿದರೂ, ಏನು ಮಾತನಾಡಿದರೂ ನಡೆಯುತ್ತದೆ ಎಂಬ ಭಾವನೆ ಬೇಕಿಲ್ಲ. ಕೋವಿಡ್‌ 2 ನೇ ಅಲೆಯ ವಿಪರೀತ ಕೆಲಸದಲ್ಲಿ ಇದ್ದ ಕಾರಣ, ಈ ವಿಷಯಗಳ ಬಗ್ಗೆ ಗಮನ ಹರಿಸಲು ಆಗಲಿಲ್ಲ. ಈಗ ಕೇಂದ್ರ ಸಚಿವ ಸಂಪುಟ ವಿಸ್ತರಣೆಯೂ ಆಗಿದೆ. ಮುಂದೆ ವರಿಷ್ಠರು ರಾಜ್ಯದ ಕಡೆ ಗಮನಹರಿಸಲಿದ್ದಾರೆ ಎಂದು ಹೇಳಿದರು.

ಕೇಂದ್ರ ಮಂತ್ರಿಮಂಡಲದ ವಿಸ್ತರಣೆ ಸಂದರ್ಭದಲ್ಲಿ ಸಾಮಾಜಿಕ ನ್ಯಾಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರಧಾನಿಯವರು ದಲಿತರು, ಹಿಂದುಳಿ ದವರು ಮತ್ತು ಮಹಿಳೆಯರಿಗೆ ಆದ್ಯತೆ ನೀಡಿದ್ದಾರೆ ಎಂದು ರವಿಕುಮಾರ್‌ ಹೇಳಿದರು.

ದಲಿತರಿಗೆ ಇಷ್ಟೊಂದು ಸಚಿವ ಸ್ಥಾನಗಳನ್ನು ಕೊಟ್ಟಿರುವುದು ದಾರಿ ತಪ್ಪಿಸುವ ಕೆಲಸ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ. ಪ್ರಾಯಶಃ ಇಷ್ಟು ವರ್ಷ ಕಾಂಗ್ರೆಸ್‌ನವರು ದಲಿತರನ್ನು ದಾರಿ ತಪ್ಪಿಸಿದ್ದು ನೆನಪಾಗಿ ಹೇಳಿರಬೇಕು ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.

‘ದಲಿತರಿಗೆ ಹೆಚ್ಚು ಸ್ಥಾನ ನೀಡಿದ ಬಗ್ಗೆ ಅವರು ಪ್ರಧಾನಿ ಮೋದಿ ಅವರನ್ನು ಅಭಿನಂದಿಸಬೇಕಿತ್ತು. ಆದರೆ, ಈ ಬೆಳವಣಿಗೆಯಿಂದ ಕಾಂಗ್ರೆಸಿಗರು ವಿಚಲಿತರಾಗಿದ್ದಾರೆ’ ಎಂದು ರವಿಕುಮಾರ್ ಅವರು ಟೀಕಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು