ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಗಮ, ಮಂಡಳಿ ನೇಮಕ ಮುಂದುವರಿಕೆ

ರಾಯಭಾಗ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಅಧ್ಯಕ್ಷ ಸ್ಥಾನ ಬದಲು
Last Updated 30 ನವೆಂಬರ್ 2020, 21:59 IST
ಅಕ್ಷರ ಗಾತ್ರ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿರುವ ಮಧ್ಯೆಯೇ, ಮತ್ತೆ ಐದು ನಿಗಮ, ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ವಾರದ ಹಿಂದೆಯಷ್ಟೆ 30ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ, ಪ್ರಾಧಿಕಾರಗಳಿಗೆ, ಸಮಿತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಿದ್ದ ಯಡಿಯೂರಪ್ಪ, ಈ ಪೈಕಿ ಕೆಲವರನ್ನು ಇದೀಗ ಬದಲಿಸಿದ್ದಾರೆ.

ರಾಯಭಾಗ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಅವರನ್ನು ಕರ್ನಾಟಕ ಆದಿಜಾಂಬವ ಅಭಿವದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ನ. 24ರಂದು ಅವರನ್ನು ಡಾ.ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ನೇಮಕಗೊಂಡಿದ್ದ ಸಿ.ಸಿ. ಮುನಿಕೃಷ್ಣ ಅವರಿಗೆ ಈಗ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮಕ್ಕೆ ಜುಲೈ 27ರಂದು ನೇಮಕಗೊಂಡಿದ್ದ ಹಾವೇರಿ ಶಾಸಕ ನೆಹರು ಓಲೇಕಾರ್‌ ಅವರಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಮಾಯಕೊಂಡ ಶಾಸಕ ಪ್ರೊ.ಎನ್‌. ಲಿಂಗಣ್ಣ ಅವರಿಗೆ ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಮಾಜಿ ಸಚಿವ, ಮೈಸೂರಿನ ಎಂ. ಶಿವಣ್ಣ ಅವರನ್ನು ಕರ್ನಾಟಕ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಬೆಂಗಳೂರು– ಮೈಸೂರು ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಪ್ರದೇಶದ ಯೋಜನಾ ಪ್ರಾಧಿಕಾರದ (ಬಿಎಂಐಸಿಎಪಿಎ) ಅಧ್ಯಕ್ಷರಾಗಿ ಎಂ. ಜಯದೇವ್‌, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ನಿರ್ದೇಶಕ ಮಂಡಳಿಯ ಉಪಾಧ್ಯಕ್ಷರಾಗಿ ಕೋಲಾರದ ಎಂ.ಆರ್‌. ವೆಂಕಟೇಶ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬೀದರ್‌ನ ಬಾಬು ವಾಲಿ (ನಿಂಗಪ್ಪಾ) ಅವರನ್ನು ನೇಮಿಸಲಾಗಿದೆ. ಚನ್ನರಾಯಪಟ್ಟಣ ನಗರ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ಶಿವನಂಜೇಗೌಡ, ಸದಸ್ಯರಾಗಿ ಅದೇ ತಾಲ್ಲೂಕಿನವರಾದ ನಿತಿನ್‌, ನಾಗರಾಜು, ಹರ್ಷವರ್ಧನ್‌ ಎಂಬುವರನ್ನು ನೇಮಿಸಲಾಗಿದೆ.

ಸಂಪುಟ ವಿಸ್ತರಣೆ ಗೊಂದಲ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ ತರಾತುರಿಯಲ್ಲಿ ಯಡಿಯೂರಪ್ಪ ಅವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕಾತಿ ನಡೆಸುತ್ತಿದ್ದಾರೆ. ಈ ಪೈಕಿ ಬಹುತೇಕ ತಮ್ಮ ಆಪ್ತರಿಗೆ ಸ್ಥಾನವನ್ನು ನೀಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT