ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಕಾರರಿಗೂ ಪ್ರತ್ಯೇಕ ನಿಗಮಕ್ಕೆ ಆಗ್ರಹ

₹ 100 ಕೋಟಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿಗೆ ಬೇಡಿಕೆ
Last Updated 28 ನವೆಂಬರ್ 2020, 6:17 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ನೇಕಾರ ಗುರುಪೀಠಗಳ ವೇದಿಕೆ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಶುಕ್ರವಾರ ಭೇಟಿ ಮಾಡಿದ ನೇಕಾರ ಸಮುದಾಯದ ಮಠಾಧೀಶರು ಮತ್ತು ಮುಖಂಡರ ನಿಯೋಗ, ನೇಕಾರ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು.

ನೇಕಾರ ಅಭಿವೃದ್ಧಿ ನಿಗಮ ಸ್ಥಾಪಿಸಿ, ₹100 ಕೋಟಿ ಅನುದಾನ ಒದಗಿಸಬೇಕು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷರ ಹುದ್ದೆಯನ್ನು ನೇಕಾರ ಸಮುದಾಯದವರಿಗೇ ನೀಡಬೇಕು ಎಂದು ಆಗ್ರಹಿಸಿತು.

ಕೋವಿಡ್‌ ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವು ನೀಡಬೇಕು. ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ನೇಕಾರರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ನೀಡಬೇಕು. ಈ ಹಿಂದೆ ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ, ನೇಕಾರರು ಲಾಕ್‌ಡೌನ್‌ ಅವಧಿಯಲ್ಲಿ ಸಿದ್ಧಪಡಿಸಿರುವ ವಸ್ತ್ರಗಳನ್ನು ಸರ್ಕಾರಿ ಸಂಸ್ಥೆಗಳ ಮೂಲಕ ಖರೀದಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿಯೋಗದ ಸದಸ್ಯರು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದರು.

ಗುಳೇದಗುಡ್ಡ ಗುರುಸಿದ್ದೇಶ್ವರ ಬೃಹನ್ಮಠದ ಬಸವರಾಜ ಪಟ್ಟದಾರ್ಯ ಸ್ವಾಮೀಜಿ, ದೊಡ್ಡಬಳ್ಳಾಪುರ ತಾಲ್ಲೂಕಿನ ತಪಸಿಹಳ್ಳಿಯ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ, ರಾಣೇಬೆನ್ನೂರು ತಾಲ್ಲೂಕು ತುಮ್ಮಿನಕಟ್ಟೆಯ ಪದ್ಮಶಾಲಿ ಗುರುಪೀಠದ ಪ್ರಭುಲಿಂಗ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಕೆ. ನಾರಾಯಣ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್‌ ಎಸ್‌. ಹರೀಶ್‌, ಕರ್ನಾಟಕ ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ಜಿ. ರಮೇಶ್‌, ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಎ.ವಿಜಯಕುಮಾರ್‌, ತೊಗಟವೀರ ಕ್ಷತ್ರಿಯ ಸಂಘದ ಅಧ್ಯಕ್ಷ ಬಿ.ಎಸ್‌. ಸೋಮಶೇಖರ್‌, ಪದ್ಮಶಾಲಿ ಸಂಘದ ಅಧ್ಯಕ್ಷ ಗುರ್ರಂ ನಾಗರಾಜು, ಕುರುಹಿನ ಶೆಟ್ಟಿ ಕೇಂದ್ರ ಸಂಘದ ಅಧ್ಯಕ್ಷ ಅಂಬಾದಾಸ್‌, ಸ್ವಕುಳ ಸಾಳಿ ಸಮಾಜದ ಮುಖಂಡ ನವೀನ್‌ ಚಿಲ್ಲಾಳ್‌ ಮತ್ತು ನೇಕಾರರ ಜಾಗೃತಿ ವೇದಿಕೆ ಅಧ್ಯಕ್ಷ ಲಿಂಗರಾಜು ಡಿ. ನೊಣವಿನಕೆರೆ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT