ಮಂಗಳವಾರ, ಜುಲೈ 5, 2022
26 °C

ಸಿ.ಎಂ ಬದಲಾವಣೆ ಇಲ್ಲ: ಅರುಣ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರೀಕ್ಷೆ ಮೀರಿ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಪ್ರಾಮಾಣಿಕ ಹಾಗೂ ಬದ್ಧತೆ ಇರುವ ಮುಖ್ಯಮಂತ್ರಿ. ಯಾವುದೇ ಕಾರಣಕ್ಕೂ ಅವರನ್ನು ಬದಲಾವಣೆ ಮಾಡುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆ ಅವರ ನೇತೃತ್ವದಲ್ಲಿಯೇ ನಡೆಯಲಿದೆ’ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ನಗರದಲ್ಲಿ ಡಿ. 28 ಮತ್ತು 29ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಸೋಮವಾರ ಸಂಜೆ ನಗರಕ್ಕೆ ಬಂದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ‘ಯಡಿಯೂರಪ್ಪ ಅವರು ಸ್ವಇಚ್ಛೆಯಿಂದ ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು’ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

‘ಗುತ್ತಿಗೆದಾರರು ಮಾಡಿರುವ ಶೇ 40ರಷ್ಟು ಕಮಿಷನ್ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಸರ್ಕಾರ ಪ್ರಾಮಾಣಿಕವಾಗಿದ್ದು, ಕೆಲ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರಬಹುದು. ಅವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ’ ಎಂದು ಹೇಳಿದರು.

ಸಮಿತಿ ರಚನೆ:

‘ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷವು ಬೆಳಗಾವಿಯಲ್ಲಿ ಸೋಲಲು ಕಾರಣವಾದ ಅಂಶಗಳೇನು ಎಂದು ತಿಳಿಯಲು ಸಮಿತಿ ರಚನೆ
ಮಾಡುತ್ತೇವೆ. ಅದಕ್ಕೆ ಪೂರಕವಾಗಿ ಸ್ಥಳೀಯರ ಅಭಿಪ್ರಾಯ ಸಹ ಸಂಗ್ರಹಿಸಲಾಗುವುದು’ ಎಂದು ಹೇಳಿದರು.

‘ಬಸವರಾಜ ಬೊಮ್ಮಾಯಿಗೆ ಕೇಂದ್ರ ಸಚಿವರಾಗುವ ಯೋಗವಿದೆ’ ಎನ್ನುವ ಸಚಿವ ಮುರುಗೇಶ ನಿರಾಣಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್, ‘ಈ ಕುರಿತು ನಿರಾಣಿ ಜೊತೆ ಮಾತನಾಡಿದ್ದೇನೆ. ತಮ್ಮ ಹೇಳಿಕೆ ತಿರುಚಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ’ ಎಂದರು.

‘ಒಗ್ಗಟ್ಟಿಲ್ಲದೆ ಕಾಂಗ್ರೆಸ್ ಇಬ್ಭಾಗ’

‘ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಇಲ್ಲದಿರುವುದರಿಂದ ಇಬ್ಭಾಗವಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಈಗಲೇ ಕಿತ್ತಾಟ ನಡೆದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ತುಷ್ಟೀಕರಣದೊಂದಿಗೆ, ಜಾತಿಗಳನ್ನು ಒಡೆದಾಳುವ ರಾಜಕಾರಣ ಮಾಡಿದ್ದರು. ಇದರಿಂದಾಗಿ ಅವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ.

ಕೇಂದ್ರದ ಕಾಂಗ್ರೆಸ್ ನಾಯಕರು ಸಹ ವಿಫಲರಾಗಿದ್ದಾರೆ. ಅವರಿಂದ ರಾಜ್ಯದ ನಾಯಕರಿಗೆ ಯಾವುದೇ ಸ್ಫೂರ್ತಿ ಸಿಗುತ್ತಿಲ್ಲ. ರಾಹುಲ್ ಗಾಂಧಿ ಮಾತನಾಡಿದರೆ, ಕಾಂಗ್ರೆಸ್‌ಗೆ ಸಿಗುವ ಮತವೂ ಕಳೆದು ಹೋಗುತ್ತದೆ’ ಎಂದು ಅರುಣ್ ಸಿಂಗ್ ವ್ಯಂಗ್ಯವಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು