ಬೆಂಗಳೂರು: ಮಹಾರಾಷ್ಟ್ರ ಸರ್ಕಾರವು ಕರ್ನಾಟಕದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ನೀಡಲು ಹೊರಟಿದೆ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದು ನಾಡಿನ ಸಾರ್ವಭೌಮತೆ ಮತ್ತು ಒಕ್ಕೂಟ ವ್ಯವಸ್ಥೆಗೆ ಹಾಕಿರುವ ಸವಾಲು ಎಂದು ಹೇಳಿದ್ದಾರೆ.
ಈ ಕುರಿತು 'ಕನ್ನಡನೆಲ' ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರದ ಏಕನಾಥ ಶಿಂದೆ ಸರ್ಕಾರವನ್ನು ಕೇಂದ್ರ ಸರ್ಕಾರ ಕೂಡಲೇ ವಜಾ ಮಾಡಬೇಕು, ರಾಜ್ಯದ ಹಿತ ಕಾಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಹಂಚಿಕೆಗೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ. ಮಹಾರಾಷ್ಟ್ರ ಸರ್ಕಾರ ಕಟ್ಟುಪಾಡು ಮೀರಿ ಕರ್ನಾಟಕದ ಜನರಿಗೆ ಯೋಜನೆ ಘೋಷಿಸಿದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಸುಮ್ಮನಿರುವುದು ನೋಡಿದರೆ ಸರ್ಕಾರಗಳು ಸತ್ತಿವೆಯಾ? ಎಂಬ ಅನುಮಾನ ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ರಾಜ್ಯದ ಒಂದಿಂಚು ಭೂಮಿಯನ್ನು ಬೇರೆಯವರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಭಾಷೆ, ಸಂಸ್ಕೃತಿ, ನೆಲ, ಜಲ ಇವು ಆರೂವರೆ ಕೋಟಿ ಕನ್ನಡಿಗರ ಹಕ್ಕು ಮತ್ತು ಸಾರ್ವಭೌಮತೆಯ ಸಂಕೇತ. ಇದಕ್ಕೆ ಚ್ಯುತಿಯಾದರೆ ನಾವು ಸುಮ್ಮನಿರುವುದಿಲ್ಲ. ಪದೇ ಪದೇ ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಎಚ್ಚರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.