ಶನಿವಾರ, ಜನವರಿ 22, 2022
16 °C
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ‘ಎ’ ಮೀಸಲಾತಿ

ಅನಗತ್ಯ ವಿಳಂಬ ಬೇಡ: ಕೂಡಲಸಂಗಮ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ‘ಎ’ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾರ ಅನಗತ್ಯ ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಸಂಬಂಧ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ಬೆಳಗಾವಿ ಅಧಿವೇಶನದ ಒಳಗಾಗಿ ವರದಿ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಮೂರ್ತಿ ಸುಭಾಸ ಅಡಿ ನೇತೃತ್ವದ ತ್ರಿಸದಸ್ಯ ಸಮಿತಿ ನೇಮಕ ಮಾಡಿರುವುದು ಕಾನೂನು ಬದ್ಧವಲ್ಲ. ಈ ಸಮಿತಿಗೆ ಸಂವಿಧಾನದಲ್ಲಿ ಯಾವುದೇ ಮಾನ್ಯತೆ ಇಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನೀಡುವ ವರದಿಯೇ ಅಂತಿಮ ಎಂದು ಹೇಳಿದರು.

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಬಾಗಲಕೋಟೆ, ಬೆಳಗಾವಿ, ವಿಜಯಪುರದಲ್ಲಿ ಹೋರಾಟ ಸಮಿತಿಯ ಕಾರ್ಯಕಾರಣ ಸಭೆಯ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು.

ಪಂಚಮಸಾಲಿ ಸಮಾಜವನ್ನು ಒಡೆಯುವ ಶಕ್ತಿಗಳು ರಾಣಿ ಚನ್ನಮ್ಮ ಕಾಲದಿಂದಲೂ ಕಾರ್ಯನಿರತವಾಗಿವೆ. ಈ ಕುತಂತ್ರಕ್ಕೆ ಕಿವಿಗೊಡದೇ ನಿರಂತರ ಹೋರಾಟದ ಮೂಲಕ ಸಮಾಜ ಸಂಘಟನೆಯನ್ನು ಮತ್ತಷ್ಟು ಬಲಿಷ್ಠ ಮಾಡುತ್ತೇವೆ ಎಂದರು.

ಪಂಚಸೇನೆ ರಾಜ್ಯ ಘಟಕದ ಅಧ್ಯಕ್ಷ ಡಾ.ಬಸನಗೌಡ ಪಾಟೀಲ, ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್‌.ರುದ್ರಗೌಡ, ನಿಂಗನಗೌಡ ಸೋಲಾಪುರ, ಸಂಜು ಬಿರಾದಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು