ಪ್ರತಿ ಕೇಂದ್ರದಲ್ಲಿ 200 ಮಂದಿಗೆ ಮಾತ್ರ ಕೋವಿಡ್ ಲಸಿಕೆ

ಬೆಂಗಳೂರು: ರಾಜ್ಯದಾದ್ಯಂತ ಸೋಮವಾರದಿಂದ (ಮಾ.1) ಎರಡನೇ ಹಂತದ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಪ್ರಾರಂಭವಾಗಲಿದ್ದು, ಪ್ರತಿ ಕೇಂದ್ರದಲ್ಲಿ ದಿನಕ್ಕೆ 200 ಮಂದಿಗೆ ಮಾತ್ರ ಲಸಿಕೆನೀಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮೊದಲ ಹಂತದ ಲಸಿಕೆ ವಿತರಣೆ ಅಭಿಯಾನಕ್ಕೆ ಜ.16ರಂದು ಚಾಲನೆ ದೊರೆತಿತ್ತು. ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ಮುಂಚೂಣಿ ಯೋಧರಿಗೆ ಲಸಿಕೆ ವಿತರಿಸಲಾಗಿದೆ. ನಿಗದಿಪಡಿಸಲಾಗಿದ್ದ 7,28,349 ಆರೋಗ್ಯ ಕಾರ್ಯಕರ್ತರಲ್ಲಿ 4,47,267 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಇವರಲ್ಲಿ 2.06 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 2,91,037 ಮುಂಚೂಣಿ ಯೋಧರಲ್ಲಿ 1,58,575 ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ.
ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಎಲ್ಲರೂ ಹಾಗೂ ಮಧುಮೇಹ ಸೇರಿದಂತೆ ಕೋವಿಡೇತರ 20 ಕಾಯಿಲೆಯನ್ನು ಎದುರಿಸುತ್ತಿರುವ 45ರಿಂದ 59 ವರ್ಷದೊಳಗಿನವರಿಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ಈ ಸಂಬಂಧ ಆರೋಗ್ಯ ಇಲಾಖೆಯು ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಕೆಲ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿದೆ. ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳ ಜತೆಗೆ ಪ್ರತಿ ಜಿಲ್ಲೆಯಲ್ಲಿ ಎರಡು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ 18 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ವಿತರಣೆ ನಡೆಯಲಿದೆ.
ಲಸಿಕೆ ವಿತರಣೆಯು ಸೋಮವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಮಾತ್ರ ನಡೆಯಲಿದೆ. ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡವರಿಗೆ ನಿಗದಿಪಡಿಸಲಾದ ದಿನಗಳಂದು ಮಧ್ಯಾಹ್ನ 12ರಿಂದ ಸಂಜೆ 5 ಗಂಟೆಯ ಅವಧಿಯಲ್ಲಿ ಲಸಿಕೆಗಳನ್ನು ವಿತರಿಸಲಾಗುತ್ತದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ಸೂಚನೆ ಅನುಸಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.