ಗುರುವಾರ , ಆಗಸ್ಟ್ 11, 2022
23 °C
ಖರೀದಿ ಕೇಂದ್ರಗಳ ಸ್ಥಾಪಿಸದ ಸರ್ಕಾರ: ಸಿದ್ದರಾಮಯ್ಯ

ಬೆಂಬಲ ಬೆಲೆ ನಿಗದಿ ಬಗ್ಗೆ ಅತೃಪ್ತಿ: ವಿರೋಧಪಕ್ಷಗಳ ಸಭಾತ್ಯಾಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ ಅಸಹಾಯಕತೆ ವ್ಯಕ್ತಪಡಿಸಿದೆ. ರೈತರ ಬಗ್ಗೆ ದಿವ್ಯ ನಿರ್ಲಕ್ಷ್ಯ ಭಾವನೆ ಹೊಂದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌ ಸದಸ್ಯರು ವಿಧಾನಸಭೆಯಲ್ಲಿ ಸಭಾತ್ಯಾಗ ಮಾಡಿದರು.

ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಂಬಲ ಬೆಲೆಯಡಿ ಖರೀದಿ ಮಾಡಲು ಸಾಧ್ಯವಿಲ್ಲ ಎಂಬ ಸರ್ಕಾರದ ಉತ್ತರದಿಂದ ಅಸಮಾಧಾನಗೊಂಡ ಜೆಡಿಎಸ್‌ ಸದಸ್ಯರು ಕೂಡ ಸಭಾತ್ಯಾಗ ಮಾಡಿದರು.

ವಿಧಾನಸಭೆಯಲ್ಲಿ ಮಂಗಳವಾರ ನಿಯಮ 69 ರಡಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಷಯ ಪ್ರಸ್ತಾಪಿಸಿದರು.

ಸರ್ಕಾರದ ಪರವಾಗಿ ಉತ್ತರ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಭತ್ತ, ರಾಗಿ ನಿಗದಿ ಮಾಡಿದ ಗುರಿಯಷ್ಟು ಖರೀದಿ ಆಗುತ್ತಿಲ್ಲ. ರೈತರು ತಂದು ಕೊಡುತ್ತಿಲ್ಲ. ಸರ್ಕಾರ ನಿಗದಿ ಮಾಡಿದ ಗುರಿಯಷ್ಟು ಖರೀದಿ ಆದರೆ, ಇನ್ನೂ ಹೆಚ್ಚು ಖರೀದಿಗೆ ಕೇಂದ್ರ ಸರ್ಕಾರವನ್ನು ಒಪ್ಪಿಸಬಹುದು. ವರ್ಷವಿಡೀ ಎಲ್ಲ ಬೆಳೆಗಳಿಗೂ ಬೆಂಬಲ ಕೊಡಲು ಆಗುವುದಿಲ್ಲ. 90 ದಿನಗಳಲ್ಲಿ ಮಾತ್ರ ಖರೀದಿಗೆ ಅವಕಾಶ ಇದೆ ಎಂದು ಹೇಳಿದರು.

‘ಮೆಕ್ಕೆ ಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಿದರೆ ಅದನ್ನು ನ್ಯಾಯಬೆಲೆ ಅಂಗಡಿ ಮೂಲಕ ಮಾರಬೇಕು. ಆದರೆ ಖರೀದಿಸುವವರು ಇಲ್ಲ. ಇದನ್ನು ಆಹಾರವಾಗಿ ಮನುಷ್ಯರು ತಿನ್ನುವುದಿಲ್ಲ. ಆದ್ದರಿಂದ ಈಗ ನಿಗದಿ ಮಾಡಿದ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಖರೀದಿಸಲು ಸಾಧ್ಯವಿಲ್ಲ’ ಎಂದು ಅವರು ಹೇಳಿದರು.

ಕಡಿಮೆ ಬೆಲೆಗೆ ಮಾರಬೇಕಾಗಿದೆ

’ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ರಾಜ್ಯ ಸರ್ಕಾರ ಖರೀದಿ ಕೇಂದ್ರಗಳನ್ನೇ ಸ್ಥಾಪಿಸಿಲ್ಲ. ಇದರಿಂದಾಗಿ, ರೈತರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರುವ ಸ್ಥಿತಿ ನಿರ್ಮಾಣವಾಗಿದೆ‘ ಎಂದು  ಸಿದ್ದರಾಮಯ್ಯ ಹೇಳಿದರು.

’ಪ್ರವಾಹದಿಂದಾಗಿ ರಾಜ್ಯದಲ್ಲಿ ಈ ವರ್ಷ 10 ಲಕ್ಷ ಟನ್‌ ಆಹಾರ ಉತ್ಪಾದನೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. 17 ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ವರ್ಷ ಭತ್ತಕ್ಕೆ ಕ್ವಿಂಟಲ್‌ಗೆ ₹1815 ಬೆಂಬಲ ಬೆಲೆ ನೀಡಲಾಗಿತ್ತು. ಈ ವರ್ಷ ₹1818 ನೀಡಲಾಗುವುದು ಎಂದು ಕೇಂದ್ರ ಪ್ರಕಟಿಸಿದೆ. ಆದರೆ, ರಾಜ್ಯ ಸರ್ಕಾರ ಖರೀದಿ ಕೇಂದ್ರ ತೆರೆಯದ ಕಾರಣ ರೈತರು ಮಾರುಕಟ್ಟೆಯಲ್ಲಿ ₹1200 ರಿಂದ ₹1400ಕ್ಕೆ ಭತ್ತ ಮಾರುತ್ತಿದ್ದಾರೆ‘ ಎಂದರು.

’1.10 ಲಕ್ಷ ಟನ್‌ನಷ್ಟು ಭತ್ತಕ್ಕೆ ಬೆಂಬಲ ಬೆಲೆ ನೀಡುವುದಾಗಿ ಕೇಂದ್ರ ತಿಳಿಸಿದೆ. ರಾಜ್ಯ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿಯಾಗಿ 1 ಲಕ್ಷ ಟನ್ ಖರೀದಿ ಮಾಡುವುದಾಗಿ ತೀರ್ಮಾನ ಕೈಗೊಂಡಿದೆ. ರಾಜ್ಯದಲ್ಲಿ ಈ ವರ್ಷ 29 ಲಕ್ಷ ಟನ್‌ ಭತ್ತ ಉತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯ ಸರ್ಕಾರ ಕನಿಷ್ಠ 21 ಲಕ್ಷ ಟನ್ ಭತ್ತವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಬೇಕು‘ ಎಂದು ಅವರು ಆಗ್ರಹಿಸಿದರು.

’ಮಹಾರಾಷ್ಟ್ರ ಸರ್ಕಾರ ಕ್ವಿಂಟಲ್‌ಗೆ ಹೆಚ್ಚುವರಿಯಾಗಿ ₹900 ನೀಡಿ ಭತ್ತ ಖರೀದಿ ಮಾಡುತ್ತಿದೆ. ರಾಜ್ಯ ಸರ್ಕಾರ ಸಹ ಕ್ವಿಂಟಲ್‌ಗೆ ಹೆಚ್ಚುವರಿಯಾಗಿ ₹500 ನೀಡಿ ಖರೀದಿ ಮಾಡಿ ರೈತರ ಹಿತ ಕಾಪಾಡಬೇಕು‘ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.