ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ,ಎಸ್‌ಟಿ ಮೀಸಲಾತಿ ಹೆಚ್ಚಳ: ಸುಗ್ರಿವಾಜ್ಞೆಗೆ ಸಂಪುಟ ಅಸ್ತು

Last Updated 20 ಅಕ್ಟೋಬರ್ 2022, 16:22 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌.ಸಿ) ಮತ್ತು ಪಂಗಡಗಳ (ಎಸ್‌.ಟಿ) ಮೀಸಲಾತಿ ಪ್ರಮಾಣವನ್ನು ಶೇ 6 ರಷ್ಟು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಂಪುಟದ ನಿರ್ಧಾರವನ್ನು ಶುಕ್ರವಾರ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗುವುದು. ಅವರ ಒಪ್ಪಿಗೆ ಸಿಕ್ಕಿದ ತಕ್ಷಣವೇ ಕಾನೂನು ಜಾರಿ ಆಗಲಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ನಮ್ಮ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪಟ್ಟಿಗೆ ಹೆಚ್ಚಿನ ಜಾತಿಗಳು ಸೇರಿವೆ. ಮೊದಲಿಗೆ ಪರಿಶಿಷ್ಟ ಜಾತಿಯಲ್ಲಿ 6 ಜಾತಿಗಳು ಇದ್ದವು. ಈಗ ಅದು 103 ಕ್ಕೆ ಹೆಚ್ಚಿದೆ . ಪರಿಶಿಷ್ಟ ಪಂಗಡದಲ್ಲಿ 2 ರಿಂದ 3 ಜಾತಿಗಳು ಇದ್ದವು ಈಗ 56 ಜಾತಿಗಳಿವೆ. ಮೀಸಲಾತಿ ಹೆಚ್ಚಳಕ್ಕೆ ಇದನ್ನೇ ಸಮರ್ಥನೆಯನ್ನಾಗಿ ಬಳಸಿಕೊಳ್ಳಲಾಗುವುದು. ಎಲ್ಲರಿಗೂ ಸೂಕ್ತ ಪ್ರಾತಿನಿಧ್ಯ ನೀಡಬೇಕಾಗುತ್ತದೆ. ಇದಕ್ಕಾಗಿ ಮೀಸಲಾತಿ ಹೆಚ್ಚಿಸುವುದು ಅನಿವಾರ್ಯ ಎಂಬುದನ್ನು ಹೇಳಬೇಕಾಗುತ್ತದೆ ಎಂದು ಅವರು ಹೇಳಿದರು.

ಸಂವಿಧಾನದ ಒಂಬತ್ತನೇ ಪರಿಚ್ಛೇದ ಅಡಿ ಮೀಸಲಾತಿ ಪ್ರಮಾಣ ಹೆಚ್ಚಿಸುವುದನ್ನು ಕೇಳುವುದಕ್ಕೂ ಮೊದಲು ಬೇರೆ ಬೇರೆ ಸಮುದಾಯಗಳ ಮೀಸಲಾತಿ ಬೇಡಿಕೆಗಳನ್ನು ಪರಿಗಣಿಸಬೇಕಾಗುತ್ತದೆ. ಮೊದಲಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿ, ಉಳಿದದ್ದು ಬಳಿಕ ನೋಡೋಣ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಹೇಳಿದರು.

ತಮಿಳುನಾಡು ಒಂಬತ್ತನೇ ಪರಿಚ್ಛೇದ ಅಡಿ ಶೇ 69 ರಷ್ಟು ಮೀಸಲಾತಿ ನೀಡಿದೆ. ಇದರ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ದಾಖಲಾಗಿದೆ. ಆದರೆ, ಸುಪ್ರೀಂಕೋರ್ಟ್‌ ತಡೆ ನೀಡಿಲ್ಲ. ಇದೇ ರೀತಿ ಹಲವು ರಾಜ್ಯಗಳು ಶೇ 50 ಕ್ಕೂ ಹೆಚ್ಚು ಮೀಸಲಾತಿ ನೀಡಿದ್ದು, ಇವುಗಳ ಪ್ರಕರಣಗಳೂ ಇತ್ಯರ್ಥವಾಗಿಲ್ಲ ಎಂದು ಮಾಧುಸ್ವಾಮಿ ತಿಳಿಸಿದರು.

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗ ಮತ್ತು ಹಾಗೂ ನಿವೃತ್ತ ನ್ಯಾಯಮೂರ್ತಿ ಸುಭಾಷ್‌ ಬಿ. ಅಡಿ ನೇತೃತ್ವದ ಸಮಿತಿಯ ಸಲ್ಲಿಸಿರುವ ವರದಿಯ ಶಿಫಾರಸು ಆಧರಿಸಿ ಪರಿಶಿಷ್ಟ ಜಾತಿಯ ಮೀಸಲಾತಿ ಶೇ 15 ರಿಂದ ಶೇ 17 ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಶೇ 3 ರಿಂದ ಶೇ 7 ಕ್ಕೆ ಹೆಚ್ಚಿಸಲು ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ವಪಕ್ಷಗಳ ಸಭೆ ಕರೆದು ಸರ್ವಾನುಮತದ ನಿರ್ಧಾರವನ್ನು ಪ್ರಕಟಿಸಿದರು.

ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು. ಇದಕ್ಕಾಗಿ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಬೇಕು. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಬೇಕು. ಆರು ತಿಂಗಳೊಳಗೆ ತಿದ್ದುಪಡಿ ಮಸೂದೆಗೆ ವಿಧಾನ ಮಂಡಲದ ಒಪ್ಪಿಗೆ ಪಡೆಯಬೇಕು. ನಂತರ ಸಂವಿಧಾನದ ಒಂಬತ್ತನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂಬ ಸಲಹೆಯನ್ನು ನಾಗಮೋಹನ್‌ ದಾಸ್‌ ಅವರು ನೀಡಿದ್ದರು. ಅದರ ಅನ್ವಯ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT