ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೆಚ್ಚಳ | ಕಾನೂನು ಹೋರಾಟಕ್ಕೂ ಸಿದ್ಧ: ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ
Last Updated 2 ಡಿಸೆಂಬರ್ 2022, 12:43 IST
ಅಕ್ಷರ ಗಾತ್ರ

ರಾಮದುರ್ಗ (ಬೆಳಗಾವಿ): 'ಸಾಮಾಜಿಕ ನ್ಯಾಯ ಎನ್ನುವುದು ಕೆಲವರ ಭಾಷಣದ ಸರಕಾಗಿದೆ. ಆದರೆ, ನಾನು ಭಾಷಣ ಮಾಡಲಿಲ್ಲ. ಪರಿಶಿಷ್ಟರ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ನ್ಯಾಯ ಕೊಡಿಸಿದ್ದೇನೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, 'ಪರಿಶಿಷ್ಟರು 40 ವರ್ಷಗಳಿಂದ ಬೇಡಿಕೆ ಇಟ್ಟರೂ ಉಳಿದ ಸರ್ಕಾರಗಳಿಗೆ ಈಡೇರಿಸಲು ಆಗಿರಲಿಲ್ಲ. ಈಗ ನಾನು ಈಡೇರಿಸಿದರೆ ಟೀಕೆ ಮಾಡುತ್ತಿದ್ದಾರೆ. ನಾನು ಇಂಥದ್ದಕ್ಕೆ ಸೊಪ್ಪು ಹಾಕುವುದಿಲ್ಲ. ಮೀಸಲಾತಿ ಹೆಚ್ಚಳ ವಿಚಾರವಾಗಿ ಕಾನೂನು ಹೋರಾಟಕ್ಕೂ ಸಿದ್ಧ' ಎಂದರು.

'ನಮ್ಮ ಸರ್ಕಾರ ಕುರಿಗಾಹಿಗಳಿಗೆ ₹350 ಕೋಟಿ ಯೋಜನೆ ರೂಪಿಸಿದೆ. ಕುರಿಗಾಹಿ ಸಂಘಗಳ ನೆರವಿಗೆ ₹20,000 ನೀಡುತ್ತಿದೆ. ಬಡವರ, ಹಿಂದುಳಿದವರ ಪರ ಕಾರ್ಯಕ್ರಮ ತರದೇ ಸಾಮಾಜಿಕ ನ್ಯಾಯದ ಭಾಷಣ ಮಾಡಿದರೆ ಏನು ಪ್ರಯೋಜನ' ಎಂದು ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು.

'ಹಿಂದುಳಿದವರ ಮಕ್ಕಳು ವಿದ್ಯಾವಂತರಾಗಬೇಕು. ಉದ್ಯೋಗ ಮಾಡಬೇಕು, ಅಂದಾಗಲೇ ಅವರಿಗೆ ಮಾನ- ಸನ್ಮಾನ ಸಿಗುತ್ತದೆ. ಹಿಂದುಳಿದವರ ಆರ್ಥಿಕ ಬೆಳವಣಿಗೆಗೆ, ಶಿಕ್ಷಣ, ಉದ್ಯೋಗಕ್ಕೆ ಆದ್ಯತೆ ನೀಡಿದ್ದೇನೆ. ರೈತ ವಿದ್ಯಾನಿಧಿ ಮೂಲಕ ಎಲ್ಲರ ಮಕ್ಕಳಿಗೂ ನೆರವಾಗಿದ್ದೇನೆ' ಎಂದರು.

'ಶಾಸಕ ಯಾದವಾಡ ಅವರು ₹2,700 ಕೋಟಿ ಅನುದಾನ ತಂದು ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮನೆ ಮನೆಗೆ ಗಂಗೆಯನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ' ಎಂದು ಸಿ.ಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, 'ಮಲಪ್ರಭಾ ನದಿ ಪ್ರವಾಹದಿಂದ ತೊಂದರೆಗೆ ಒಳಗಾಗುತ್ತಿದ್ದ ಗ್ರಾಮಗಳ ರಕ್ಷಣೆಗೆ ₹126 ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತದೆ. ತಾಲ್ಲೂಕಿನ 19 ಕೆರೆಗಳನ್ನು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ಕ್ರಮ ವಹಿಸಲಾಗುವುದು' ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಮಹಾದೇವಪ್ಪ ದೊಡ್ಡವಾಡ, 'ರಾಮದುರ್ಗ ತಾಲ್ಲೂಕಿನ ಜನರಿಗೆ ಕುಡಿಯುವ ಒದಗಿಸುವ ₹ 439 ಕೋಟಿಯ ಯೋಜನೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಕುಡಿಯುವ ನೀರು, ಶಾಲಾ ಕಟ್ಟಡಗಳ ನಿರ್ಮಾಣ, ವಿದ್ಯುತ್ ವಿತರಣೆ ವ್ಯವಸ್ಥೆ ಬಲಪಡಿಸುವುದು ಸೇರಿದಂತೆ ಹತ್ತಾರು ಅಭಿವೃದ್ಧಿ ಯೋಜನೆಗಳಿಗೆ ನೆರವು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾವು ಋಣಿ' ಎಂದರು.

ಶಾಸಕರಾದ ಮಹಾಂತೇಶ ದೊಡ್ಡಗೌಡರ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ದುರ್ಯೋದನ ಐಹೊಳೆ ಮಾತನಾಡಿದರು.

ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ನಗರಾಭಿವೃದ್ಧಿ ಸಚಿವ ಬಿ.ವಿ.ಬಸವರಾಜ್ (ಭೈರತಿ), ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಪಿ.ರಾಜೀವ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಹನುಮಂತ ನಿರಾಣಿ, ಶಾಸಕ ಅನಿಲ ಬೆನಕೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಮತ್ತಿತರರು ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT