ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಉಪಕರಣಗಳ ಖರೀದಿ ಅವ್ಯವಹಾರ: ಮೂರು ವರದಿ ಸಲ್ಲಿಸಲು ಪಿಎಸಿ ನಿರ್ಧಾರ

Last Updated 9 ನವೆಂಬರ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಔಷಧಿ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರ, ವಿಶ್ವವಿದ್ಯಾಲಯಗಳಲ್ಲಿ ಬೋಧಕರ ನೇಮಕಾತಿಯಲ್ಲಿನ ನಿಯಮ ಉಲ್ಲಂಘನೆ ಹಾಗೂ ಹಾಸನ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳಿಂದ ನಿರಾಶ್ರಿತರಾದವರಿಗೆ ಜಮೀನು ಮಂಜೂರಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತ ವರದಿಗಳನ್ನು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಮಂಗಳವಾರ ಅಂತಿಮಗೊಳಿಸಿದೆ.

ರಾಮಲಿಂಗಾರೆಡ್ಡಿ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅವಧಿ ಮುಕ್ತಾಯವಾಗುತ್ತಿದೆ. ಮಂಗಳವಾರ ಕೊನೆಯ ಸಭೆ ನಡೆಸಿದ ಸಮಿತಿ ವರದಿಗಳನ್ನು ಅಂತಿಮಗೊಳಿಸಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಅಂತಿಮ ವರದಿಗಳನ್ನು ವಿಧಾನಮಂಡಲಕ್ಕೆ ಸಲ್ಲಿಸುವ ನಿರ್ಣಯ ಅಂಗೀಕರಿಸಲಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಧ್ಯಂತರ ವರದಿ ಸಲ್ಲಿಸಲು ಸಮಿತಿ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

‘ಕೋವಿಡ್‌ ಅವಧಿಯಲ್ಲಿ ಹಾಗೂ ಅದಕ್ಕೂ ಮೊದಲು ಆರೋಗ್ಯ ಇಲಾಖೆಯಲ್ಲಿ ನಡೆದಿರುವ ಔಷಧಿ, ವೈದ್ಯಕೀಯ ಉಪಕರಣ ಹಾಗೂ ಇತರ ಪರಿಕರಗಳ ಖರೀದಿ ಕುರಿತು ಪಿಎಸಿ ಪರಿಶೀಲನೆ ನಡೆಸಿದೆ. ಹಲವು ಪ್ರಕರಣಗಳಲ್ಲಿ ನಿಯಮ ಉಲ್ಲಂಘನೆ, ದುಬಾರಿ ಮೊತ್ತಕ್ಕೆ ಖರೀದಿಯಂತಹ ಸಂಗತಿಗಳು ಕಂಡುಬಂದಿವೆ. ಎಲ್ಲವನ್ನೂ ವರದಿಯಲ್ಲಿ ದಾಖಲಿಸಲಾಗಿದೆ. ಶೀಘ್ರದಲ್ಲಿಯೇ ವರದಿಯನ್ನು ವಿಧಾನಮಂಡಲಕ್ಕೆ ಸಲ್ಲಿಸಲಾಗುವುದು’ ಎಂದು ಮೂಲಗಳು ಹೇಳಿವೆ.

ಹೇಮಾವತಿ ಜಲಾಶಯ ಯೋಜನೆ, ವಾಟೆಹೊಳೆ ಯೋಜನೆ ಸೇರಿದಂತೆ ಹಾಸನ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳಿಂದ ನಿರಾಶ್ರಿತರಾದವರಿಗೆ ಪುನರ್ವಸತಿ ಕಲ್ಪಿಸುವ ಹೆಸರಿನಲ್ಲಿ ಅನ್ಯರಿಗೆ ಜಮೀನು ಮಂಜೂರು ಮಾಡಿರುವ ಕುರಿತು ಸಮಿತಿ ವಿಚಾರಣೆ ನಡೆಸಿದೆ. ಈ ಬಗ್ಗೆ ವಿಸ್ತೃತವಾದ ವರದಿಯನ್ನು ಸಿದ್ಧಪಡಿಸಲಾಗಿದೆ. ರಾಜ್ಯದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಬೋಧಕರ ನೇಮಕಾತಿಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ ನಿಯಮಗಳನ್ನು ಉಲ್ಲಂಘಿಸಿರುವುದಕ್ಕೆ ಸಂಬಂಧಿಸಿದ ವರದಿಯಬನ್ನೂ ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT