ಶುಕ್ರವಾರ, ಅಕ್ಟೋಬರ್ 22, 2021
28 °C

ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ತಾತ್ಕಲಿಕ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕು ಎಂದು ಪುನಃ ಹೋರಾಟ ಆರಂಭಿಸಿ, ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯಂಜಯ ಸ್ವಾಮೀಜಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಯ ಬಳಿಕ ಹೋರಾಟವನ್ನು ತಾತ್ಕಾಲಿಕವಾಗಿ ಕೈ ಬಿಟ್ಟಿದ್ದಾರೆ.

ಶುಕ್ರವಾರ ಬೆಳಿಗ್ಗೆ ಸ್ವಾಮೀಜಿ ಜತೆ ಬೊಮ್ಮಾಯಿ ಸುದೀರ್ಘ ಮಾತುಕತೆ ನಡೆಸಿದರು. ಆ ಬಳಿಕ ಅವರು ಹೋರಾಟವನ್ನು ಕೈಬಿಡಲು ಒಪ್ಪಿಕೊಂಡರು ಎಂದು ಮೂಲಗಳು ತಿಳಿಸಿವೆ.

ಕಾನೂನಿನ ತೊಡಕುಗಳು, ಹಿಂದುಳಿದ ವರ್ಗದ ಆಯೋಗದಿಂದ ಸರ್ಕಾರ ವರದಿ ಕೇಳಿರುವ ವಿಚಾರದ ಬಗ್ಗೆ ಸ್ವಾಮೀಜಿಯವರಿಗೆ ವಿವರಿಸಿದ ಬೊಮ್ಮಾಯಿ, ‘ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರ ಸಕಾರಾತ್ಮಕವಾಗಿದೆ. ಆದ್ದರಿಂದ ಮತ್ತೆ ಹೋರಾಟ ನಡೆಸುವುದು ಬೇಡ’ ಎಂದು ಹೇಳಿದರು. ಬೊಮ್ಮಾಯಿಯವರ ಮನವಿಗೆ ಸ್ಪಂದಿಸಿದ ಸ್ವಾಮೀಜಿ ಸಮುದಾಯದ ಮುಖಂಡರ ಜತೆ ಮಾತುಕತೆ ನಡೆಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸ್ವಾಮೀಜಿ, ‘ಮುಖ್ಯಮಂತ್ರಿ ಅವರ ಮೇಲೆ ವಿಶ್ವಾಸ ಇಟ್ಟಿದ್ದೇವೆ. ಕಾದು ನೋಡುವ ತೀರ್ಮಾನಕ್ಕೆ ಬಂದಿದ್ದು, ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ’ ಎಂದು ಪ್ರಕಟಿಸಿದರು.

‘ಈ ಹಿಂದೆ ಆರು ತಿಂಗಳಲ್ಲಿ ಮೀಸಲಾತಿ ಮೀಸಲಾತಿ ನೀಡದಿದ್ದರೆ ಅಕ್ಟೋಬರ್‌ 1 ರಿಂದ ಸತ್ಯಾಗ್ರಹ ಮುಂದುವರಿಸಲು ತೀರ್ಮಾನಿಸಲಾಗಿತ್ತು. ಅಲ್ಲದೆ,  ದಾವಣಗೆರೆಯಲ್ಲಿ ಗುರುವಾರ ನಡೆದ ಪಂಚಮಸಾಲಿ ಸಮಾವೇಶ ನೋಡಿ ಸರ್ಕಾರ ಬೆಚ್ಚಿ ಬಿದ್ದಿದೆ. ಆದ್ದರಿಂದ ಮುಖ್ಯಮಂತ್ರಿಯವರು ಮಾತುಕತೆಗೆ ಆಹ್ವಾನಿಸಿದರು. ಒಂದೂವರೆ ಗಂಟೆ ಚರ್ಚೆ ಮಾಡಿದೆವು. ಮೀಸಲಾತಿಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಆಯೋಗ ವರದಿ ಕೊಟ್ಟ ಬಳಿಕ ಮೀಸಲಾತಿ ಬಗ್ಗೆ ತೀರ್ಮಾನಿಸುವುದಾಗಿ ಬೊಮ್ಮಾಯಿ ಭರವಸೆ ನೀಡಿದರು’ ಎಂದು ಸ್ವಾಮೀಜಿ ಹೇಳಿದರು.

‘ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಮೂರು ತಿಂಗಳಲ್ಲಿ ಮೀಸಲಾತಿ ನೀಡಬೇಕು ಎಂದು ಸರ್ಕಾರಕ್ಕೆ ತಿಳಿಸಿದ್ದೇವೆ. ಒಂದು ವೇಳೆ ಆ ಅವಧಿಯಲ್ಲಿ ಮೀಸಲಾತಿ ನೀಡದಿದ್ದರೆ ಬೆಂಗಳೂರಿನಲ್ಲಿ ಸತ್ಯಾಗ್ರಹ ಮುಂದುವರಿಸುತ್ತೇವೆ. ಆದರೆ, ಗ್ರಾಮ ಮತ್ತು ತಾಲ್ಲೂಕು ಮಟ್ಟದಲ್ಲಿ ಮಿಸಲಾತಿ ಅಭಿಯಾನ ಮುಂದುವರಿಯಲಿದೆ. ಸದ್ಯವೇ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಪಂಚಮಸಾಲಿಗಳನ್ನು ಎದುರು ಹಾಕಿಕೊಳ್ಳವುದು ಬೇಡ’ ಎಂಬ ಅಭಿಪ್ರಾಯವೂ ವ್ಯಕ್ತವಾಯಿತು ಎಂದು ಸ್ವಾಮೀಜಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು