ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮಾವೇಶ: ಅರಮನೆ ಮೈದಾನಕ್ಕೆ ಸ್ಥಳಾಂತರ

Last Updated 13 ಫೆಬ್ರುವರಿ 2021, 7:38 IST
ಅಕ್ಷರ ಗಾತ್ರ

ತುಮಕೂರು: ಪ್ರವರ್ಗ ‘2ಎ’ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಇದೇ 21ರಂದು ಬೆಂಗಳೂರಿನವಸ್ತು ಪ್ರದರ್ಶನ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಮಾವೇಶವನ್ನು ಅರಮನೆ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.

ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಶುಕ್ರವಾರ ರಾತ್ರಿ ಸಿದ್ಧಗಂಗಾ ಮಠ ತಲುಪಿತ್ತು. ಮಠದಲ್ಲೇ ರಾತ್ರಿ ತಂಗಿದ್ದು, ಶನಿವಾರ ಬೆಳಿಗ್ಗೆ ಸಿದ್ಧಲಿಂಗ ಸ್ವಾಮೀಜಿ ಜತೆ ಸ್ವಾಮೀಜಿ ಚರ್ಚಿಸಿದರು. ನಂತರ ಸಮಾಜದ ಮುಖಂಡರ ಜತೆಗೂ ಸಭೆ ನಡೆಸಿದರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ‘ಸಭೆಯಲ್ಲಿ ಚರ್ಚಿಸಿ ಸ್ಥಳ ಬದಲಾವಣೆ ಮಾಡುವ ಬಗ್ಗೆ ನಿರ್ಧರಿಸಲಾಯಿತು. ವಿಧಾನಸೌಧಕ್ಕೆ ಅರಮನೆ ಮೈದಾನ ಹತ್ತಿರದಲ್ಲೇ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಯಿತು’ ಎಂದು ವಿವರಿಸಿದರು.

ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಬಹಿರಂಗ ಸಮಾವೇಶದಲ್ಲಿ ಪಂಚಮಸಾಲಿ ಸಮುದಾಯದ 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಸಮಾವೇಶದ ನಂತರ ವಿಧಾನಸೌಧದವರೆಗೂ ಪಾದಯಾತ್ರೆ ನಡೆಸಲಾಗುವುದು. ಫೆ. 22ರಿಂದ ವಿಧಾನಸೌಧದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಮಾರ್ಚ್ 4ರ ಒಳಗೆ ಸರ್ಕಾರ ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲವಾದರೆ ಮಾರ್ಚ್ 5ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಪ್ರಕಟಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು. ಮೀಸಲಾತಿ ಕಲ್ಪಿಸುವ ಸಂಬಂಧ ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ಪಡೆಯಲಾಗುವುದು ಎಂದು ಹೇಳಿದ್ದರು. ಆದರೆ ಈವರೆಗೂ ಆಯೋಗಕ್ಕೆ ಪತ್ರ ಬರೆದಿಲ್ಲ ಎಂದರು.

ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಲಿಂಗಾಯತ ಮಠಾಧೀಶರು ಬೆಂಗಳೂರಿನಲ್ಲಿ ಸಭೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿ, ‘ಲಿಂಗಾಯತ ಸಮುದಾಯದ ಎಲ್ಲರಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಲಿ. ಅದಕ್ಕೆ ತಮ್ಮ ಅಭ್ಯಂತರವಿಲ್ಲ. ಆದರೆ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಮೀಸಲಾತಿ ಸಿಗಬೇಕು ಎಂಬುದಷ್ಟೇ ತಮ್ಮ ಹೋರಾಟ’ ಎಂದು ಸ್ಪಷ್ಟಪಡಿಸಿದರು.

ಹೋರಾಟ ಬೆಂಬಲಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ನೋಟಿಸ್ ನೀಡಿರುವುದಕ್ಕೆ ಅಸಮಾಧಾನ ಹೊರಹಾಕಿದರು. ಸಮಾಜದ ಮುಖಂಡರಿಗೆ ನೋಟಿಸ್ ಕೊಟ್ಟು, ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಯಾವ ಅಡೆತಡೆಗಳು ಎದುರಾದರೂ, ಯಾರು ಏನೇ ಮಾಡಿದರೂ ಹೋರಾಟ ನಿಲ್ಲುವುದಿಲ್ಲ ಎಂದು ಸ್ವಾಮೀಜಿ ಎಚ್ಚರಿಸಿದರು.

ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ಸಮಾಜದ ಸ್ವಾಮೀಜಿಗಳನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಹೋರಾಟವನ್ನು ಹತ್ತಿಕ್ಕುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಯಾವುದಕ್ಕೂ ಜಗ್ಗುವುದಿಲ್ಲ ಎಂದು ಗುಡುಗಿದರು.

ವಚನಾನಂದ ಸ್ವಾಮೀಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT