ಗುರುವಾರ , ಫೆಬ್ರವರಿ 9, 2023
30 °C
ಅಧಿಕಾರಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಗಡುವು

2,934 ಕಲಾವಿದರಿಗೆ 15 ದಿನಗಳೊಳಗೆ ಮಾಸಾಶನ: ಸಿ.ಟಿ.ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ 2,934 ಕಲಾವಿದರಿಗೆ ಹಲವು ತಿಂಗಳುಗಳಿಂದ ಸ್ಥಗಿತಗೊಂಡಿರುವ ಮಾಸಾಶನವನ್ನು 15 ದಿನಗಳೊಳಗೆ ವಿತರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸೌಧದಲ್ಲಿ ಬುಧವಾರ ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕಲಾವಿದರಿಗೆ ಮಾಸಾಶನ ಸ್ಥಗಿತಗೊಂಡಿರುವ ಎಲ್ಲ ಪ್ರಕರಣಗಳನ್ನು 15 ದಿನಗಳೊಳಗೆ ಇತ್ಯರ್ಥಗೊಳಿಸಬೇಕು. ವಿಳಂಬ ಮಾಡಕೂಡದು’ ಎಂದು ತಾಕೀತು ಮಾಡಿದರು.

ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಅಕಾಡೆಮಿಗಳು ₹3.45 ಕೋಟಿ ಪಾವತಿ ಮಾಡಿವೆ. ಈ ಮೊತ್ತವನ್ನು ಅಕಾಡೆಮಿಗಳಿಗೆ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಸಚಿವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆಲವು ಅಕಾಡೆಮಿಗಳಲ್ಲಿ ಮೂರು ವರ್ಷಗಳಿಂದ ಬಾಕಿ ಇರುವ ವಾರ್ಷಿಕ ಪ್ರಶಸ್ತಿಗಳ ವಿತರಣೆಗೆ ತ್ವರಿತ ಕ್ರಮ ಕೈಗೊಳ್ಳಬೇಕು. ತುಳು, ಕೊಂಕಣಿ, ಬ್ಯಾರಿ ಹಾಗೂ ಕೊಡವ ಅಕಾಡೆಮಿಗಳ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಅಕಾಡೆಮಿ ಮತ್ತು ಪ್ರಾಧಿಕಾರಗಳ ಪುಸ್ತಕ ಮುದ್ರಣದಲ್ಲಿ ಪುನರಾವರ್ತನೆ ಆಗಬಾರದು. ಹೊಸ ಬರಹಗಾರರ ಕೃತಿಗಳಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಸಿದ್ಧತೆಗೆ ಸೂಚನೆ: ಕೇಂದ್ರ ಸರ್ಕಾರದ ವತಿಯಿಂದ ನಡೆಯುವ ರಾಷ್ಟ್ರೀಯ ಲಲಿತ ಕಲಾ ಮೇಳವನ್ನು ಈ ಬಾರಿ ಕರ್ನಾಟಕದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಆರಂಭಿಸಬೇಕು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ವಿಸ್ತೃತ ವರದಿಯೊಂದನ್ನು ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ವಿ. ರಶ್ಮಿ ಮಹೇಶ್‌, ನಿರ್ದೇಶಕ ರಂಗಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಹಾಗೂ ವಿವಿಧ ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು