ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಹತ್ಯೆ ನಿಷೇಧ ಸುಗ್ರೀವಾಜ್ಞೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌

ಸರ್ಕಾರಕ್ಕೆ ನೋಟಿಸ್‌ ಜಾರಿಗೆ ಆದೇಶಿಸಿದ ನ್ಯಾಯಾಲಯ
Last Updated 12 ಜನವರಿ 2021, 19:52 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಪ್ರದೇಶ ಮಾದರಿಯ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿ ಹೊರಡಿಸಿರುವ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಿರುವ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೆ ಮಂಗಳವಾರ ಆದೇಶಿಸಿದೆ.

ಬೆಂಗಳೂರಿನ ಸಾಮಾಜಿಕ ಹೋರಾಟಗಾರ ಮೊಹಮ್ಮದ್ ಆರೀಫ್‌ ಜಮೀಲ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ಪೀಠ, ನಿಯಮಗಳನ್ನೇ ರಚಿಸದೆ ಕಾಯ್ದೆಯ ಕೆಲವು ಅಂಶಗಳನ್ನು ಹೇಗೆ ಅನುಷ್ಠಾನಕ್ಕೆ ತರಲಾಗುತ್ತದೆ ಎಂಬುದನ್ನು ವಿವರಿಸುವಂತೆ ಅಡ್ವೊಕೇಟ್‌ ಜನರಲ್‌ ಅವರಿಗೆ ನಿರ್ದೇಶನ ನೀಡಿದೆ.

ಮೂಲಭೂತ ಹಕ್ಕುಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳು ಸೌಹಾರ್ದವಾಗಿ ಸಾಗಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಎರಡರ ನಡುವೆ ಸಂಘರ್ಷ ಉದ್ಭವಿಸಿದಾಗ ಮೂಲಭೂತ ಹಕ್ಕುಗಳೇ ಪ್ರಮುಖವಾಗುತ್ತವೆ ಎಂಬುದನ್ನೂ ಸ್ಪಷ್ಟಪಡಿಸಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯು ಸಂವಿಧಾನದ 48 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಶಂಕೆಯ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ. ಗೋವುಗಳ ಮಾರಾಟ, ಖರೀದಿ ಮತ್ತು ಮರು ಮಾರಾಟದ ಸಂಪೂರ್ಣ ನಿಷೇಧವು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಲಿದೆ. ಈ ಸುಗ್ರೀವಾಜ್ಞೆಯು ಆಹಾರದ ಆಯ್ಕೆಯ ಕಾರಣಕ್ಕಾಗಿ ಮುಸ್ಲಿಮರು, ದಲಿತರು ಮತ್ತು ಇತರ ಅಲ್ಪಸಂಖ್ಯಾತ ವರ್ಗಗಳ ಜನರನ್ನು ಕ್ರಿಮಿನಲ್‌ ಅಪರಾಧಿಗಳನ್ನಾಗಿ ಪರಿವರ್ತಿಸುವ ಅಪಾಯವಿದೆ. ಗೋರಕ್ಷಣೆಯ ಹೆಸರಿನಲ್ಲಿ ಗುಂಪು ಹಲ್ಲೆ, ಹತ್ಯೆಗಳಿಗೂ ಎಡೆಮಾಡುವ ಸಾಧ್ಯತೆ ಇದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.

‘‌ನಿಯಮಗಳನ್ನು ರಚಿಸದೇ ಸುಗ್ರೀವಾಜ್ಞೆ ಜಾರಿ ಮಾಡಿರುವುದರಿಂದ ಹಸು ಸಾಕಣೆ ಮಾಡುವ ರೈತರನ್ನೂ ಶಂಕೆಯ ಮೇಲೆ ಬಂಧಿಸಲು ಅವಕಾಶ ನೀಡಿದಂತಾಗಿದೆ. ಕೃಷಿ ಉದ್ದೇಶಕ್ಕೆ ಹಸು ಹೊಂದಿರುವವರೂ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ’ ಎಂದ ನ್ಯಾಯಪೀಠ, ಫೆಬ್ರುವರಿ 17ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡಿತು. ನಿಯಮಗಳ ರಚನೆಗೆ ಸಂಬಂಧಿಸಿದಂತೆ ಫೆ.18ರಂದು ವಿಚಾರಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT