ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಮಟ್ಟದಲ್ಲಿ ಕೋವಿಡ್ ಕಾರ್ಯಪಡೆಗೆ ಪ್ರಧಾನಿ ಮೋದಿ ಸಲಹೆ: ಬಸವರಾಜ ಬೊಮ್ಮಾಯಿ

Last Updated 18 ಮೇ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮಗಳ ಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಾರ್ಯಪಡೆಗಳನ್ನು ರಚಿಸಬೇಕು. ಅಲ್ಲದೆ, ಜಿಲ್ಲಾ ಮಟ್ಟದಲ್ಲಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಧಿಕಾರಿಗಳು ‘ಫೀಲ್ಡ್‌ ಕಮಾಂಡರ್‌’ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

ಪ್ರಧಾನಿ ಜತೆ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ್ದ ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು. ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಗ್ರಾಮೀಣ ಮತ್ತು ಸಣ್ಣ ಪಟ್ಟಣಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ನಿಯಂತ್ರಿಸುವುದು ದೊಡ್ಡ ಸವಾಲು. ಈ ಕೆಲಸಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಪಡೆ ರಚಿಸುವುದು ಅಗತ್ಯ. ಇದಕ್ಕೆ ಸ್ತ್ರೀಶಕ್ತಿ, ಮಹಿಳಾ ಮತ್ತು ಯುವಕರ ಸಂಘ–ಸಂಸ್ಥೆಗಳ ನೆರವು ಪಡೆಯಬೇಕು. ಸೋಂಕಿತ ವ್ಯಕ್ತಿಯ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಮೇಲೆ ನಿಗಾ ಇಟ್ಟು ಅವರಿಗೆ ಸೋಂಕು ತಗುಲದಂತೆ ಮಾಡಿದರೆ ನಿಯಂತ್ರಣ ಸಾಧ್ಯ ಎಂಬುದಾಗಿ ಸಲಹೆ ನೀಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ರಾಜ್ಯ ಸರ್ಕಾರದ ಮುಖ್ಯ ಆದೇಶಗಳನ್ನು ಸ್ಥಳೀಯ ಮಟ್ಟದಲ್ಲಿ ಕಾರ್ಯಗತಗೊಳಿಸುವ ಜವಾಬ್ದಾರಿ ಜಿಲ್ಲಾಧಿಕಾರಿಗಳದ್ದು. ಅದರ ಮೇಲುಸ್ತುವಾರಿ ಜಿಲ್ಲೆಯ ಜನಪ್ರತಿನಿಧಿಗಳದ್ದು. ಈ ಕೆಲಸವನ್ನು ಕೇವಲ ಜಿಲ್ಲಾಧಿಕಾರಿ ಅಲ್ಲದೆ, ಜಿಲ್ಲಾ ಮಟ್ಟದ ಎಲ್ಲ ಪ್ರಮುಖ ಅಧಿಕಾರಿಗಳೂ ಮಾಡಬೇಕಾಗಿದೆ. ಸ್ಥಳೀಯವಾಗಿ ಕೆಲ ಬದಲಾವಣೆ ಜತೆಗೆ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.

‘ಚೆನ್ನೈನಲ್ಲಿ ಆಂಬುಲೆನ್ಸ್‌ ವ್ಯವಸ್ಥೆ ಉತ್ತಮವಾಗಿದೆ ಎಂದು ಪ್ರಧಾನಿಯವರು ಹೇಳಿದರು. ಅದನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ’ ಎಂದು ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ವಿಡಿಯೊ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದರು.

ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರು ಪ್ರಧಾನಿಯವರಿಗೆ ಬೆಂಗಳೂರಿನ ಕೋವಿಡ್‌ ಸ್ಥಿತಿಯ ಬಗ್ಗೆ ವಿವರಿಸಿದರು.

ಮೂರನೇ ಅಲೆ ತಡೆಯಲು ಕಾರ್ಯಕ್ರಮ

‘ಕೋವಿಡ್‌ ಮೂರನೇ ಅಲೆ ಮಕ್ಕಳನ್ನೇ ಹೆಚ್ಚಾಗಿ ಬಾಧಿಸುತ್ತದೆ ಎನ್ನಲಾಗುತ್ತಿದೆ. ಅದನ್ನು ತಡೆಯಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸುವಂತೆ ಪ್ರಧಾನಿ ಸಲಹೆ ನೀಡಿದರು’ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ಹರಡುವಿಕೆ ಬಗ್ಗೆ ಮಕ್ಕಳಲಗಲಿ ಅರಿವು ಮೂಡಿಸಲು ಅವರ ತಿಳಿವಳಿಕೆ ಮಟ್ಟಕ್ಕೆ ಇಳಿದು ಸ್ಥಳೀಯ ಭಾಷೆಯಲ್ಲಿ ಕಾರ್ಟೂನ್, ಲೇಖನ, ಕಥೆ ಮುಂತಾದವುಗಳು ಮೂಲಕ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದೂ ಸಲಹೆ ನೀಡಿದ್ದಾಗಿ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT