ಶನಿವಾರ, ಜನವರಿ 16, 2021
28 °C

ವ್ಯಾಖ್ಯಾನಗಳಿಗೆ ಕಾರಣವಾದ ಮೋದಿ ಶುಭಾಶಯ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಧಾನಿ ನರೇಂದ್ರ ಮೋದಿ-ಸಾಂದರ್ಭಿಕ ಚಿತ್ರ

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಟ್ವಿಟರ್‌ ಮೂಲಕ ಜನ್ಮದಿನದ ಶುಭಾಶಯ ಕೋರಿದ ಬಗ್ಗೆ ರಾಜಕೀಯ ವಲಯಗಳಲ್ಲಿ ವಿವಿಧ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

‘ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ನೀಡಲಿ’ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ. ‘ಪ್ರಧಾನಿಯವರೇ ನಿಮ್ಮ ಶುಭ ಹಾರೈಕೆಗಳಿಗೆ ಧನ್ಯವಾದಗಳು’ ಎಂದು ಕುಮಾರಸ್ವಾಮಿ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಿ ಮಾತ್ರವಲ್ಲ ಬಿಜೆಪಿಯ ರಾಷ್ಟ್ರೀಯ ಮುಖಂಡರು, ರಾಜ್ಯದ ಹಿರಿಯ ಮುಖಂಡರು, ಸಚಿವರು, ಸಂಸದರು ಸೇರಿದಂತೆ ಹಲವರು ಕುಮಾರಸ್ವಾಮಿ ಅವರಿಗೆ ಶುಭಾಶಯ ಕೋರಿದ್ದಾರೆ.  ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆಗಳ ತಿದ್ದುಪಡಿ ಮಸೂದೆಗಳನ್ನು ಬೆಂಬಲಿಸಿರುವುದು ಮತ್ತು ವಿಧಾನ ಪರಿಷತ್‌ ಸಭಾಪತಿ ವಿರುದ್ಧದ ಅವಿಶ್ವಾಸ ನಿಲುವಳಿಗೆ ಕೈಜೋಡಿಸಿದ ಬಳಿಕ ಎರಡೂ ಪಕ್ಷಗಳ ನಂಟು ಬಲಗೊಳ್ಳುತ್ತಿದೆ.

‘ಮೈತ್ರಿ‘ಯ ಮೂಲಕ ವಿಧಾನ ಪರಿಷತ್‌ ಸಭಾಪತಿಯವರ ಪದಚ್ಯುತಿಗೂ ಸಜ್ಜಾಗಿವೆ. ಈ ಬೆಳವಣಿಗೆಗಳ ನಡುವೆಯೇ ಪ್ರಧಾನಿ ಸೇರಿದಂತೆ ಬಿಜೆಪಿಯ ಹಲವು ಪ್ರಮುಖರು ಕುಮಾರಸ್ವಾಮಿ ಅವರಿಗೆ ಶುಭಾಶಯ ಕೋರಿದ್ದಾರೆ. ಅಲ್ಲದೆ, ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್‌ ಜತೆ ಸ್ನೇಹ ಬೆಳೆಸಲು ಬಿಜೆಪಿ ಉದ್ದೇಶಿಸಿದೆ ಎಂದೂ ವ್ಯಾಖ್ಯಾನಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು