ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣುಮಕ್ಕಳ ಶಿಕ್ಷಣದ ಕುರಿತು ಬಿಜೆಪಿ ನಿಲುವೇನು: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

Last Updated 18 ಫೆಬ್ರುವರಿ 2022, 10:45 IST
ಅಕ್ಷರ ಗಾತ್ರ

ಬೆಂಗಳೂರು:ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಹಿಂಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಹಾಗೂಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಹಾಗೆಯೇ,ಹೆಣ್ಣು ಮಕ್ಕಳ ಶಿಕ್ಷಣದ ವಿಚಾರದಲ್ಲಿ ಬಿಜೆಪಿಯ ನಿಲುವು ಏನು ಎಂಬುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ತಿಳಿಸಬೇಕು ಎಂದು ಕೇಳಿದ್ದಾರೆ.

ಸುತ್ತೋಲೆಗೆ ಸಂಬಂಧಿಸಿದಂತೆ #HijabCircular ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವಸಿದ್ದರಾಮಯ್ಯ, 'ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ' ಎಂದು ಆಗ್ರಹಿಸಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ, 'ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ' ಎಂದು ತಿಳಿಸಿದ್ದಾರೆ.

ಮುಂದುವರಿದು, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ. ಶಾಲಾಭಿವೃದ್ಧಿ ಸಮಿತಿ ರೂಪಿಸಿದ ಸಮವಸ್ತ್ರ ನೀತಿಗೆ ಮಾತ್ರ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ. ಹಾಗಾಗಿ ಈ ಸುತ್ತೋಲೆ ಘನ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತದೆ' ಎಂದು ಕಿಡಿಕಾರಿದ್ದಾರೆ.

'ಅಲ್ಪಸಂಖ್ಯಾತ ನಿಯೋಗದ ಜೊತೆ ನಾನು, ಡಿ.ಕೆ.ಶಿವಕುಮಾರ್‌ಅವರು ಇಂದು ಮುಖ್ಯಮಂತ್ರಿಬಸವರಾಯ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಗೊಂದಲ ನಿವಾರಿಸುವಂತೆ ಹೇಳಿದ್ದೇವೆ.ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಕಾಳಜಿ' ಎಂದು ಮನವಿ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿಯ ನಡೆಯನ್ನು ವಿರೋಧಿಸಿರುವ ಮಾಜಿ ಸಿಎಂ, 'ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಬಚಾವೊ, ಭೇಟಿ ಪಡಾವೋ ಎನ್ನುತ್ತಾರೆ. ಬಿಜೆಪಿಯವರೇ ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು ಎಂದು ಮೋದಿಯವರೇ ಉತ್ತರಿಸಬೇಕು' ಎಂದು ಆಗ್ರಹಿಸಿದ್ದಾರೆ.

'ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್‌ಎಸ್‌ಎಸ್‌ ಇರಲಿ, ಎಸ್‌ಡಿಪಿಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ' ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT