ಮಂಗಳವಾರ, ಮಾರ್ಚ್ 21, 2023
23 °C
‘ಪ್ರಜಾವಾಣಿ’ ಅಮೃತ ಮಹೋತ್ಸವ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರಿಗೆ ಕಾರ್ಯಾಗಾರ

ಬಡ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ: ರೇವಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಬಡ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಜವಾಬ್ದಾರಿ ಸರ್ಕಾರ ಹಾಗೂ ಸಮಾಜದ ಮೇಲಿದೆ ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದರು.

‘ಪ್ರಜಾವಾಣಿ’ ಅಮೃತ ಮಹೋತ್ಸವದ ಅಂಗವಾಗಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಹಾಗೂ ಶಿಕ್ಷಣ ಪ್ರೇಮಿ ಶಿಕ್ಷಣ ಪ್ರೇಮಿ ಅನಂತ್‌ಕುಮಾರ್‌ ಎನ್‌.ಆರ್‌. ಸಹಯೋಗದಲ್ಲಿ ಹೊಳೆನರಸೀಪುರ ತಾಲ್ಲೂಕಿನ ಹಂಗರಹಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾರ್ಯಾಗಾರ ಹಾಗೂ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಒದಗಿಸಲು ಒತ್ತು ನೀಡಬೇಕು. ಅದೇ ರೀತಿ ಶಿಕ್ಷಕರು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡುವ ಮೂಲಕ ದೇಶದ ಸಂಪತ್ತನ್ನಾಗಿ ರೂಪಿಸಬೇಕು ಎಂದರು.

ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿತ್ತು. 2006 ರಲ್ಲಿ ಒಂದೇ ವರ್ಷ 180 ಪದವಿ ಕಾಲೇಜು, 600 ಪದವಿಪೂರ್ವ ಕಾಲೇಜು, 1300 ಪ್ರೌಢಶಾಲೆಗಳು, 363 ಐಟಿಐಗಳನ್ನು ಆರಂಭಿಸಿತ್ತು. ಅಲ್ಲದೇ ಈ ಶಿಕ್ಷಣ ಕೇಂದ್ರಗಳಿಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ಶಿಕ್ಷಕರನ್ನು ಒದಗಿಸುವ ಕೆಲಸ ಮಾಡಿತ್ತು ಎಂದು ತಿಳಿಸಿದರು.

ಬಡಜನರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸಲು ಆಗುವುದಿಲ್ಲ. ಹಾಗಾಗಿ ಸರ್ಕಾರದಿಂದ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಮೂಲಕ ಅವರ ಮಕ್ಕಳಿಗೂ ಒಳ್ಳೆಯ ಶಿಕ್ಷಣ ಸಿಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದ ಅವರು, ಮುಂಬರುವ ದಿನಗಳಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಹೋಬಳಿ ಕೇಂದ್ರದಲ್ಲಿ ಕೆಪಿಎಸ್‌ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಉಪ ವಿಭಾಗಾಧಿಕಾರಿ ಬಿ.ಎ. ಜಗದೀಶ್‌ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಸತ್ಪ್ರಜೆಗಳಾಗಬೇಕು. ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ, ಸಾಧಿಸುವ ಛಲಗಳನ್ನು ಬೆಳೆಸಿಕೊಳ್ಳಬೇಕು. ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಮುಕಂದೂರು ಮಠದ ಮಹಾಂತೇಶ ಬಸಪ್ಪ ಸ್ವಾಮೀಜಿ ಮಾತನಾಡಿ, ಗಳಿಸಿದ್ದನ್ನು ಸಮಾಜಕ್ಕೆ ನೀಡುವ ಉದಾತ್ತ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಓದಿ ಬೇಸರವಾದರೆ, ಬರೆಯುವುದು, ಬರೆದು ಬೇಸರವಾದರೆ ಓದುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹೊಳೆನರಸೀಪುರ ತಹಶೀಲ್ದಾರ ಕೆ. ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದ್ದು, ‘ಪ್ರಜಾವಾಣಿ’ ವತಿಯಿಂದ ಏರ್ಪಡಿಸಿರುವ ಕಾರ್ಯಾಗಾರದ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಹೊಳೆನರಸೀಪುರ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ, ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಗುರುಗಳು, ತಂದೆ–ತಾಯಿ, ಸಮಾಜ ಮೆಚ್ಚುವ ವ್ಯಕ್ತಿಗಳಾಗಿ ರೂಪಗೊಳ್ಳಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೌಸರ್‌ ಅಹಮ್ಮದ್‌, ಹೊಳೆನರಸೀಪುರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅನಂತಕುಮಾರ್‌, ಶಿಕ್ಷಣಾಧಿಕಾರಿ ತಮ್ಮಣ್ಣಗೌಡ, ವಿಶ್ವನಾಥ, ರುದ್ರೇಶ್‌ ಹಂಗರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಯಪ್ಪ, ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪ್ರಸರಣ ವಿಭಾಗದ ವ್ಯವಸ್ಥಾಪಕ ಪ್ರಕಾಶ್‌, ಹಾಸನ ಪ್ರತಿನಿಧಿ ಮಲ್ಲೇಶ್‌, ಹೊಳೆನರಸೀಪುರ ಪ್ರತಿನಿಧಿ ಎಚ್‌.ವಿ. ಸುರೇಶ್‌ಕುಮಾರ್‌, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮೋಹನ್‌ಕುಮಾರ್‌, ಕ್ರೈಸ್‌ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವಿಚಂದ್ರ ಪಿ.ಎನ್‌., ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ, ಉದ್ಯಮಿ ವಾಸು, ಗ್ರಾಮದ ಮುಖಂಡರಾದ ರಂಗೇಗೌಡ, ರಾಜೇಗೌಡ, ಕೌಸಲ್ಯ ರಾಮು, ಅಣ್ಣಯ್ಯಣ್ಣ ಪಾಲ್ಗೊಂಡಿದ್ದರು. ವಸತಿ ಶಾಲೆಯ ಪ್ರಾಂಶುಪಾಲೆ ಭಾಗ್ಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ರವಿಪ್ರಕಾಶ್‌ ಎಸ್‌.ಎನ್‌. ಸ್ವಾಗತಿಸಿದರು.

ಮಾದರಿ ಪತ್ರಿಕೆ ‘ಪ್ರಜಾವಾಣಿ’

ಈ ದೇಶದಲ್ಲಿ ರಾಜಕೀಯವಾಗಿ ನಿರ್ಲಿಪ್ತತೆಯನ್ನು ಕಾಪಾಡಿಕೊಂಡು ಬಂದಿರುವ ಪತ್ರಿಕೆ ‘ಪ್ರಜಾವಾಣಿ’. ರಾಜಕಾರಣವನ್ನು ನಿರ್ಲಿಪ್ತವಾಗಿ ನೋಡುವ ಬೇರೆ ಪತ್ರಿಕೆ ಸಿಗಲಾರದು. ಸಮಾಜಕ್ಕೆ ಮಾದರಿಯಾದ ಪತ್ರಿಕೆ 75 ವಸಂತಗಳನ್ನು ಪೂರೈಸಿರುವುದು ಬಹುದೊಡ್ಡ ಸಾಧನೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಮಲ್ಲೇಶಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

‘ಪ್ರಜಾವಾಣಿ’ ಪತ್ರಿಕೆ ಸಮಾಜಕ್ಕೆ ಅಗತ್ಯವಾದ ಸುದ್ದಿಗಳನ್ನು ನೀಡುವ ಸಮಾಜದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಇದೀಗ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾರ್ಯಾಗಾರ ಏರ್ಪಡಿಸುವ ಮೂಲಕ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೂ ಚಿಂತನೆ ನಡೆಸುತ್ತಿರುವುದು ಅಭಿನಂದನಾರ್ಹ ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದರು.

‘ವಿದ್ಯಾರ್ಥಿಗಳ ಮಾರ್ಗದರ್ಶಿ’

‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳು ದೈನಂದಿನ ಆಗುಹೋಗುಗಳ ಸುದ್ದಿಗಳ ಜೊತೆಗೆ ಪ್ರತಿ ದಿನವೂ ಒಂದೊಂದು ವಿಷಯದ ಬಗ್ಗೆ ವಿಶೇಷ ಪುಟಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿವೆ ಎಂದು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪ್ರಸರಣ ವಿಭಾಗದ ಡಿಜಿಎಂ ಜಗನ್ನಾಥ ಜೋಯಿಸ್‌ ತಿಳಿಸಿದರು.

ಇಂದಿನ ಜಗತ್ತು ಸ್ಪರ್ಧಾತ್ಮಕವಾಗಿದ್ದು, ವಿದ್ಯಾರ್ಥಿಗಳು ಈಗಿನಿಂದಲೇ ಜೀವನ ಗುರಿಯನ್ನು ಇಟ್ಟುಕೊಳ್ಳಬೇಕು. ಅದನ್ನು ಸಾಧಿಸಲು ನಿರಂತರ ಪ್ರಯತ್ನ ಮಾಡಬೇಕು. ಈ ನಿಟ್ಟಿನಲ್ಲಿ ‘ಪ್ರಜಾವಾಣಿ’ ವಿದ್ಯಾರ್ಥಿಗಳಿಗಾಗಿ ‘ಮಾಸ್ಟರ್‌ ಮೈಂಡ್‌’ ಅನ್ನು ಪ್ರಕಟಿಸುತ್ತಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು