ಮಂಗಳವಾರ, ಮೇ 11, 2021
25 °C

ಜೆಡಿಎಸ್‌ ತೊರೆದು ಬಿಜೆಪಿ ಸೇರಿದ ಪ್ರಕಾಶ ಖಂಡ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ (ಬೀದರ್‌ ಜಿಲ್ಲೆ): ಕಳೆದ ವಿಧಾನಸಭಾ ಚುನಾವಣೆಯ ನಂತರ ರಾಜಕೀಯದಿಂದ ದೂರ ಉಳಿದಿದ್ದ ಭಾಲ್ಕಿಯ ಮಾಜಿ ಶಾಸಕ ಪ್ರಕಾಶ ಖಂಡ್ರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣಸಿಂಗ್‌ ಸಮ್ಮುಖದಲ್ಲಿ ಮತ್ತೆ ಬಿಜೆಪಿ ಸೇರಿದ್ದಾರೆ.

ಬಸವಕಲ್ಯಾಣದಲ್ಲಿ ಭಾನುವಾರ ನಡೆದ ಉಪ ಚುನಾವಣೆಯ ಪ್ರಚಾರ ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಪ್ರಕಾಶ ಖಂಡ್ರೆ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಬರಮಾಡಿಕೊಂಡರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ‌ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಸಂಸದ ಭಗವಂತ ಖೂಬಾ, ಶೈಲೇಂದ್ರ ಬೆಲ್ದಾಳೆ ಜಿಲ್ಲೆಯ ಪ್ರಮುಖ ನಾಯಕರು ಇದ್ದರು.

ಪ್ರಕಾಶ ಖಂಡ್ರೆ 1999ರಿಂದ 2018ರ ವರೆಗೆ ಬಿಜೆಪಿಯಲ್ಲಿ ಇದ್ದರು. ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

2008, 2013ರಲ್ಲಿ ಭಾಲ್ಕಿ ಮತ್ತು 2016ರಲ್ಲಿ ಬೀದರ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. 2018ರಲ್ಲಿ ಬಿಜೆಪಿ ಟಿಕೆಟ್ ದೊರೆಯದ ಕಾರಣ ಮುನಿಸಿಕೊಂಡು ಜೆಡಿಎಸ್‌ ಸೇರಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.

ಮೂರು ವರ್ಷಗಳ ಬಳಿಕ ಮತ್ತೆ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ್ದಾರೆ. ಉಪ ಚುನಾವಣೆ ಸಂದರ್ಭದಲ್ಲೇ ಪ್ರಕಾಶ ಖಂಡ್ರೆ ಅವರು ಜೆಡಿಎಸ್ ತೊರೆದು ಮತ್ತೆ ಬಜೆಪಿ ಸೇರಿರುವುದು ರಾಜಕೀಯವಾಗಿ ಮಹತ್ವ ಪಡೆದಿದೆ.

ಮನವೊಲಿಕೆಗೆ ಕುಮಾರಸ್ವಾಮಿ ಯತ್ನ

ಪ್ರಕಾಶ ಖಂಡ್ರೆ ಜೆಡಿಎಸ್‌ ತೊರೆದು ಬಿಜೆಪಿಗೆ ಸೇರಲಿರುವ ವಿಷಯ ತಿಳಿದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಎರಡು ದಿನಗಳ ಹಿಂದೆ ಪ್ರಕಾಶ ಖಂಡ್ರೆ ಅವರನ್ನು ಶಾಸಕ ಬಂಡೆಪ್ಪ ಕಾಶೆಂಪೂರ್‌ ಅವರ ನಿವಾಸಕ್ಕೆ ಕರೆದು ಮಾತುಕತೆ ನಡೆಸಿದ್ದರು. ಕುಮಾರಸ್ವಾಮಿ ಅವರು ಪಕ್ಷ ಬಿಡದಂತೆ ಮನವಿ ಮಾಡಿದರೂ ಗಟ್ಟಿ ನಿರ್ಧಾರ ಕೈಗೊಂಡು ಮತ್ತೆ ಬಿಜೆಪಿಗೆ ಸೇರಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು