ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಾಲ ಶುಲ್ಕ: ಶೀಘ್ರ ನಿರ್ಧಾರ

Last Updated 18 ಜನವರಿ 2021, 18:55 IST
ಅಕ್ಷರ ಗಾತ್ರ

ಬೆಂಗಳೂರು: ‘ಖಾಸಗಿ ಶಾಲೆಗಳ ಶುಲ್ಕ ನಿಗದಿ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಲ್ಲಿಸಿರುವ ವರದಿಯ ಸಂಬಂಧ ಶೀಘ್ರವೇ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಶುಲ್ಕ ನಿಗದಿ ಕುರಿತಂತೆ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘಟನೆಗಳ ಪ್ರತಿನಿಧಿಗಳು ಮತ್ತು ಖಾಸಗಿ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಇತ್ತೀಚೆಗೆ ನಡೆಸಿದ್ದರು.

ಎರಡೂ ಕಡೆಯ ಅಭಿಪ್ರಾಯ ಆಲಿಸಿ, ಮನವಿ ಸ್ವೀಕರಿಸಿದ್ದ ಅವರು ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ಆಧರಿಸಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಶನಿವಾರ ವರದಿ ಸಲ್ಲಿಸಿದ್ದರು.

ಆಯುಕ್ತರ ವರದಿ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸೋಮವಾರ ಚರ್ಚೆ ನಡೆಸಿದ್ದಾರೆ. ಖಾಸಗಿ ಶಾಲೆಯ ಶುಲ್ಕ ನಿಗದಿ ಮಾರ್ಗಸೂಚಿ ಬಿಡುಗಡೆ ಮಾಡುವ ಸಂಬಂಧ ಸರ್ಕಾರ ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಿದೆ’ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಕೊರೊನಾ ಕಾರಣ ತರಗತಿಗಳು ಸರಿಯಾಗಿ ನಡೆದಿಲ್ಲ. ಅಲ್ಲದೆ, ಪೋಷಕರು ಕೂಡಾ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ಶೇ 50ರಷ್ಟು ಶುಲ್ಕ ಮಾತ್ರ ಪಡೆಯಲು ಖಾಸಗಿ ಶಾಲೆಗಳಿಗೆ ಸೂಚಿಸಬೇಕು ಎಂದು ಸರ್ಕಾರಕ್ಕೆ ಪೋಷಕರು ಮನವಿ ಮಾಡಿದ್ದರು. ಪೋಷಕರು ಮನವಿ ಮಾಡಿದ ಪ್ರಮಾಣದಲ್ಲಿ ಶುಲ್ಕ ಕಡಿತಗೊಳಿಸಲು ಸಾಧ್ಯವಿಲ್ಲ. ಕಳೆದ ಶೈಕ್ಷಣಿಕ ಸಾಲಿನಷ್ಟೇ ಶುಲ್ಕ ವಿಧಿಸುತ್ತಿದ್ದೇವೆ. ಜೊತೆಗೆ ಆಯಾ ಶಾಲೆಗಳ ಆಡಳಿತ ಮಂಡಳಿಗಳು ಕೆಲವು ವಿನಾಯತಿ ನೀಡಲಿವೆ. ಎಲ್ಲ ವಿದ್ಯಾರ್ಥಿಗಳೂ ಶಾಲೆಗಳಿಗೆ ಕಡ್ಡಾಯವಾಗಿ ದಾಖಲಾಗುವಂತೆ ಸೂಚಿಸಬೇಕು ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT