ಮಂಗಳವಾರ, ಜನವರಿ 19, 2021
25 °C

ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ‘ರುಪ್ಸಾ‘ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೊರೊನಾದಿಂದ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳ ಶಿಕ್ಷಕರಿಗೆ ಪರಿಹಾರ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಮಾನ್ಯತೆ ಪಡೆದ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘ’ದ (ರುಪ್ಸಾ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಮೌರ್ಯವೃತ್ತದ ಎದುರು ಜಮಾಯಿಸಿದ ನೂರಾರು ಶಿಕ್ಷಕರು, ಸ್ವಾತಂತ್ರ್ಯ ಉದ್ಯಾನವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ನಡೆಯ ವಿರುದ್ಧ ವಿವಿಧ ಘೋಷಣೆ ಕೂಗಿ, ಆಕ್ರೋಶ ಹೊರ ಹಾಕಿದರು.

ಒಂಬತ್ತು ತಿಂಗಳಿನಿಂದ ವೇತನ ಇಲ್ಲದೆ ಕಷ್ಟದಲ್ಲಿರುವ ಖಾಸಗಿ ಶಾಲಾ ನೌಕರರಿಗೆ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಕನಿಷ್ಠ ಮಾಸಿಕ ₹ 10 ಸಾವಿರದಂತೆ 9 ತಿಂಗಳ ಹಣ ನೀಡಬೇಕು. ಖಾಸಗಿ ಶಾಲೆಗಳಿಗೆ ಪರಿಹಾರ ಒದಗಿಸಲು ಕನಿಷ್ಠ ₹ 1 ಸಾವಿರ ಕೋಟಿಯ ಪ್ಯಾಕೇಜ್ ಘೋಷಿಸಬೇಕು. 1985ರಿಂದ 2010ರವರೆಗಿನ ಎಲ್ಲ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳನ್ನು ಸರ್ಕಾರದ ಅನುದಾನಕ್ಕೆ ಒಳಪಡಿಸಬೇಕು. ಖಾಸಗಿ ಶಾಲೆಗಳ ಶಿಕ್ಷಕರ ಸಮಸ್ಯೆ ಪರಿಹರಿಸಲು ಸರ್ಕಾರ ಮುಂದಾಗಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ‘ಮೂರು ತಿಂಗಳಿಂದ ಸರ್ಕಾರಕ್ಕೆ ನಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಮಾಡುತ್ತಿದ್ದೇವೆ. ನಮ್ಮ ಮನವಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ. ಒಕ್ಕೂಟದ ಕಾರ್ಯಕರ್ತರ 15 ಬೇಡಿಕೆಗಳಲ್ಲಿ ಎರಡು ಬೇಡಿಕೆಗಳನ್ನು ಮಾತ್ರ ಸರ್ಕಾರ ಈಡೇರಿಸಿದೆ. ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಸುತ್ತೋಲೆಗಳನ್ನು ಮರು ಪರಿಶೀಲಿಸಬೇಕು. ಕೊರೊನಾ ನಂತರದಲ್ಲಿ ಶಾಲೆಗಳು ಆರಂಭಗೊಂಡಿದ್ದು, ತಕ್ಷಣ ಶೈಕ್ಷಣಿಕ ಕ್ಯಾಲೆಂಡರ್ ಹಾಗೂ ಪಠ್ಯಪುಸ್ತಕವನ್ನು ನಿಗದಿಗೊಳಿಸಿ ಬಿಡುಗಡೆ ಮಾಡಬೇಕು. ಖಾಸಗಿ ಶಾಲೆಗಳ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಬೇಕು' ಎಂದು ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು