ಭಾನುವಾರ, ಸೆಪ್ಟೆಂಬರ್ 27, 2020
27 °C
ಇತ್ತೀಚೆಗಷ್ಟೇ ಸರ್ಕಾರಿ ಕೆಲಸಕ್ಕೆ ಸೇರಿದ್ದ ಮಾಜಿ ಸೈನಿಕ ಗಂಗಾಧರಯ್ಯ

ಕೋವಿಡ್ ಕರ್ತವ್ಯ ನಿರತ ಪ್ರೊಬೇಷನರಿ ಎ.ಸಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಚ್‌.ಎಂ.ಗಂಗಾಧರಯ್ಯ

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಆರಂಭಿಸಿರುವ ಕೋವಿಡ್‌ ಆರೈಕೆ ಕೇಂದ್ರದ ನೋಡಲ್‌ ಅಧಿಕಾರಿಯಾಗಿದ್ದ ಪ್ರೊಬೇಷನರಿ ಉಪವಿಭಾಗಾಧಿಕಾರಿ ಎಚ್‌.ಎಂ.ಗಂಗಾಧರಯ್ಯ (45) ಅವರು ಹೃದಯಾಘಾತದಿಂದಾಗಿ ಶನಿವಾರ ಮೃತಪಟ್ಟರು.

ಗಂಗಾಧರಯ್ಯ ಅವರು ತುಮಕೂರು ಜಿಲ್ಲೆಯ ತುರುವೆಕೆರೆ ತಾಲ್ಲೂಕಿನ ಡಿ.ಹೊಸಹಳ್ಳಿ ಗ್ರಾಮದವರು.

ಕೋವಿಡ್ ಇರಲಿಲ್ಲ: ‘ಅವರು ಮಾಜಿ ಸೈನಿಕರ ಕೋಟದಲ್ಲಿ ಇತ್ತೀಚೆಗಷ್ಟೇ ಉಪವಿಭಾಗಾಧಿಕಾರಿಯಾಗಿ ಸರ್ಕಾರಿ ಸೇವೆಗೆ ಸೇರಿದ್ದರು. ಅವರನ್ನು ಬಿಐಇಸಿ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅವರಿಗೆ ಸಂಜೆ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಸಪ್ತಗಿರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಅವರಿಗೆ ಕೋವಿಡ್‌ ಇರಲಿಲ್ಲ’  ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಗಂಗಾಧರಯ್ಯ ಅವರ ಸಾವಿಗೆ ಮುಖ್ಯಮಂತ್ರಿ ಬಿ..ಎಸ್‌.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. ‘ದಕ್ಷ ಅಧಿಕಾರಿಯಾಗಿದ್ದ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ’ ಎಂದು ಈ ಕುರಿತು ಅವರು ಟ್ವೀಟ್‌ ಮಾಡಿದ್ದಾರೆ. 

₹ 25 ಲಕ್ಷ ಪರಿಹಾರ ಘೋಷಣೆ:

‘ಗಂಗಾಧರಯ್ಯ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹ 25 ಲಕ್ಷ ಪರಿಹಾರ ನೀಡಲಾಗುತ್ತದೆ. ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಲಾಗುತ್ತದೆ. ಅವರ ಅಂತ್ಯಕ್ರಿಯೆಯಯನ್ನು ಪೊಲೀಸ್‌ ಗೌರವದೊಂದಿಗೆ ನಡೆಸಲಾಗುತ್ತದೆ' ಎಂದೂ ಮುಖ್ಯಮಂತ್ರಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು