ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕನ್ನಡ ಭಾಷೆ ಕಲಿಕೆ ಅತ್ಯಗತ್ಯ: ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಅಭಿಮತ

Last Updated 24 ಸೆಪ್ಟೆಂಬರ್ 2021, 19:22 IST
ಅಕ್ಷರ ಗಾತ್ರ

ಬೆಂಗಳೂರು: ‘ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಭಾಷೆಗಳೇ ಮಾತೃಭಾಷೆ. ಈ ರಾಜ್ಯದಲ್ಲಿ ಕಲಿಯುವಾಗ ಇಲ್ಲಿನ ಪರಿಸರ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಆಯ್ಕೆಯಾಗಿ ಕಲಿಯುವುದು ಅತ್ಯಗತ್ಯ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಪ್ರತಿಪಾದಿಸಿದ್ದಾರೆ.

ಕನ್ನಡ ಭಾಷಾ ಕಲಿಕಾ ಕಾಯ್ದೆ–2021 ಪ್ರಶ್ನಿಸಿ, ಇಲ್ಲಿನ ಬಿಷಪ್ ಕಾಟನ್ ಶಾಲೆಯ 10 ವರ್ಷದ ವಿದ್ಯಾರ್ಥಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ಒಕ್ಕೂಟ ವ್ಯವಸ್ಥೆಯಲ್ಲಿ ಹಿಂದಿಯೇತರ ರಾಜ್ಯಗಳು ತಮ್ಮ ರಾಜ್ಯ ಭಾಷೆಯನ್ನು ಶಿಕ್ಷಣ ಹಾಗೂ ಆಡಳಿತದಲ್ಲಿ ಉಳಿಸಿಕೊಳ್ಳುವುದು ಸವಾಲಾಗಿದೆ. ಮಾತೃಭಾಷೆಯ ಹೆಸರಿನಲ್ಲಿ ರಾಜ್ಯ ಭಾಷೆಗಳ ಅಸ್ತಿತ್ವವನ್ನೇ ಬುಡಮೇಲು ಮಾಡುವ ಕಾರ್ಯ ಅವ್ಯಾಹತವಾಗಿ ನಡೆಯುತ್ತಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ‘ಮಾತೃಭಾಷೆ’ ಎಂಬ ಪರಿಭಾಷೆ ಹೊಸ ಪ್ರಯೋಗ. ರಾಜ್ಯದಲ್ಲಿ ಆಂಗ್ಲ ಭಾಷೆಯಲ್ಲಿ ಕಲಿಯುತ್ತಿರುವ ಎಷ್ಟೋ ಮಕ್ಕಳ ಮಾತೃ ಭಾಷೆ ಇಂಗ್ಲಿಷ್ ಆಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಐಸಿಎಸ್‌ಸಿ, ಸಿಬಿಎಸ್‌ಸಿ ನೆಪ ಹೇಳುತ್ತಾ 2015ರ ಕನ್ನಡ ಭಾಷಾ ಕಲಿಕಾ ಕಾಯ್ದೆಯನ್ನು ಸಂವಿಧಾನ ವಿರೋಧಿ ಎಂದು ಕರೆಯುತ್ತಿರುವ ಮನಸ್ಸುಗಳ ಹಿಂದಿನ ಶಿಕ್ಷಣ ವ್ಯಾಪಾರೀಕರಣ ಬುದ್ಧಿಯನ್ನು ನೋಡಿದರೆ ದಿಗ್ಭ್ರಮೆಯಾಗುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಭಾಷೆಗಳೇ ಮಾತೃಭಾಷೆಯೆಂದು ಪರಿಗಣಿತವಾಗಬೇಕು. ಕೇಂದ್ರ ಸರ್ಕಾರದ ನೌಕರರ ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಕಲಿಯುವುದಕ್ಕೆ ಯಾರ ತಕರಾರೂ ಇಲ್ಲ. ಆದರೆ, ಈ ರಾಜ್ಯದಲ್ಲಿ ಕಲಿಯುವಾಗ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಇಲ್ಲಿನ ಭಾಷೆಯನ್ನು ಕಲಿಯಬೇಕು’ ಎಂದು ಆಗ್ರಹಿಸಿದ್ದಾರೆ.

‘ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಯುವ ಅಗತ್ಯತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಸಬೇಕು’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಜವಾಬ್ದಾರಿಯುತವಾಗಿ ವಾದಿಸಲಿ: ಎಚ್‌ಡಿಕೆ
ಕರ್ನಾಟಕದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಡ್ಡಾಯವಾಗಿ ಕಲಿಸುವುದನ್ನು ವಿರೋಧಿಸಿ ಕೆಲವರು ಹೈಕೋರ್ಟ್‌ಗೆ ಹೋಗಿದ್ದಾರೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನ್ಯಾಯಾಲಯದಲ್ಲಿ ವಾದ ನಡೆಸಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಶುಕ್ರವಾರ ಟ್ವೀಟ್‌ ಮಾಡಿರುವ ಅವರು, ‘ ನಮ್ಮ ಭಾಷೆಯನ್ನು ಉಳಿಸಿಕೊಳ್ಳಲು ಮತ್ತು ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಮಹತ್ವವನ್ನು ಹೈಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು’ ಎಂದು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT