ಮಂಗಳವಾರ, ಸೆಪ್ಟೆಂಬರ್ 28, 2021
25 °C

ಮುಜರಾಯಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಅಧೀನದ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ವಿಧಾನಸೌಧದಲ್ಲಿ ನೂತನ ಕಚೇರಿಯ ಪೂಜೆ ನಡೆಸಿದ ಅವರು ಅಧಿಕಾರಿಗಳ ಜತೆ ಸಭೆ ನಡೆಸಿದರು.

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎ, ಬಿ ಮತ್ತು ಸಿ ದರ್ಜೆಯ ದೇವಸ್ಥಾನಗಳ ಜಿಲ್ಲಾವಾರು ಮಾಹಿತಿ ಪಡೆದುಕೊಂಡು, ಆಸ್ತಿ ಎಷ್ಟಿದೆ ಎಂಬುದನ್ನು ಸಮೀಕ್ಷೆ ನಡೆಸಿ, ದೇವಸ್ಥಾನಗಳ ಆಸ್ತಿ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ದೇವಸ್ಥಾನಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಅಲ್ಲದೆ, ಭಕ್ತರಿಗೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಮಹಾರಾಷ್ಟ್ರದ ಫಂಡರಾಪುರ ಮತ್ತು ತುಳಜಾ ಭವಾನಿ, ತಮಿಳುನಾಡು, ಕೇರಳದ ಪ್ರಸಿದ್ಧ ದೇವಸ್ಥಾನಗಳಲ್ಲಿ ಕರ್ನಾಟಕದ ಯಾತ್ರಿ ನಿವಾಸ್‌ ನಿರ್ಮಾಣ ಮಾಡುವ ಬಗ್ಗೆಯೂ ಅವರು ಅಧಿಕಾರಿಗಳ ಜತೆ ಚರ್ಚಿಸಿದರು.

ಕೋವಿಡ್‌ ಕಾರಣ ದೇವಸ್ಥಾನಗಳಿಗೆ ಸಂಪೂರ್ಣ ನಿಷೇಧ ಹೇರುವ ಬದಲು ಭಕ್ತರನ್ನು ತಂಡಗಳನ್ನಾಗಿ ವಿಂಗಡಿಸಿ ದರ್ಶನಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಬಹುದು ಎಂದು ಜೊಲ್ಲೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು