ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಸ್‌ಯುಐ ವಿರುದ್ಧ ಸುಳ್ಳು ಮೊಕದ್ದಮೆ: ಡಿಕೆಶಿ ಆರೋಪ

Last Updated 4 ಜೂನ್ 2022, 13:54 IST
ಅಕ್ಷರ ಗಾತ್ರ

ತುಮಕೂರು: ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಬಳಿ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಜೈಲಿಗೆ ಕಳುಹಿಸಿರುವುದಕ್ಕೆ ಪೊಲೀಸ್ ಅಧಿಕಾರಿಗಳು ಮುಂದೆ ಉತ್ತರ ಕೊಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದರು.

ಜಿಲ್ಲಾ ಕಾರಾಗೃಹದಲ್ಲಿ ಇರುವ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಶನಿವಾರ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ, ಸರ್ಕಾರದ ಮಾತು ಕೇಳಿದ್ದಾರೆ. ಒತ್ತಡಕ್ಕೆ ಮಣಿದು ಜಾಮೀನು ಸಿಗದಂತೆ ಮಾಡಲು ಸುಳ್ಳು ಸೆಕ್ಷನ್‌ಗಳನ್ನು ಹಾಕಲಾಗಿದೆ. ಇಂತಹ ಕೆಲಸ ಮಾಡಿರುವುದಕ್ಕೆ ಪೊಲೀಸ್ ಅಧಿಕಾರಿಗಳೂ ಮುಂದೆ ಶಿಕ್ಷೆ ಅನುಭವಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಶಿವಮೊಗ್ಗದಲ್ಲಿ ಸಚಿವರೇ ಮುಂದೆ ನಿಂತುಕೊಂಡು ಲೂಟಿ ಮಾಡಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ರೈತ ಮುಖಂಡ ರಾಕೇಶ್ ಟಿಕಾಯತ್ ಅವರಿಗೆ ಮಸಿ ಬಳಿದು, ಪ್ರಧಾನಿ ನರೇಂದ್ರ ಮೋದಿ ಪರವಾಗಿ ಘೋಷಣೆ ಕೂಗಿದವರ ವಿರುದ್ಧ ಯಾವ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂಬುದೂ ಗೊತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ರೂಪಿಸಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದರು.

ಇತಿಹಾಸ ಬದಲಿಸಿ, ಪಠ್ಯದಲ್ಲಿ ವಿಚಾರ ತಿರುಚಲಾಗಿದೆ. ಬಸವಣ್ಣ, ಭಗತ್ ಸಿಂಗ್, ಕುವೆಂಪು, ನಾರಾಯಣಗುರು, ಟಿಪ್ಪು ವಿಚಾರಗಳನ್ನು ತಿರುಚಿ ಅಪಮಾನ ಮಾಡಲಾಗಿದೆ. ಇದನ್ನು ಮಠಾಧೀಶರು, ಸಾಹಿತಿಗಳು, ಹೋರಾಟಗಾರರು ಪ್ರಶ್ನಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿ, ಚಡ್ಡಿ ಸುಟ್ಟಿದ್ದಾರೆ. ಇದೂ ಒಂದು ಪ್ರತಿಭಟನೆಯ ಸ್ವರೂಪ. ಸಚಿವರ ಮನೆಗೆ ನುಗ್ಗಿಲ್ಲ, ರಾಷ್ಟ್ರಧ್ವಜ ಸುಟ್ಟಿಲ್ಲ. ಕೆಟ್ಟ ಕೆಲಸ ಮಾಡಿಲ್ಲ. ಅಂತಹವರ ವಿರುದ್ಧ ಸುಳ್ಳು ಸೆಕ್ಷನ್‌ಗಳನ್ನು ಹಾಕಲಾಗಿದೆ ಎಂದು ದೂರಿದರು.

ಅಧರ್ಮ, ಅನೀತಿ ವಿರುದ್ಧ ಪ್ರತಿಭಟನೆ ನಡೆಸಿದರೆ ಮೊಕದ್ದಮೆ ದಾಖಲಿಸಿ ಹೋರಾಟ ಹತ್ತಿಕ್ಕುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಅಧಿಕಾರ ದುರುಪಯೋಗ ಆಗುತ್ತಿದೆ ಎಂದು ಆರೋಪಿಸಿದರು.

ನಾಗೇಶ್ ಮನೆ ಮುಂದೆ ಪ್ರತಿಭಟನೆ ನಡೆಸಿ ಚಡ್ಡಿ ಸುಟ್ಟ ತಕ್ಷಣ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಇಬ್ಬರು ಪರಿಶಿಷ್ಟ ಯುವಕರ ಕೊಲೆಯಾದಾಗ ಯಾವ ಸಚಿವರೂ ಭೇಟಿ ಕೊಡಲಿಲ್ಲ. ಆಗ ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT