ಶನಿವಾರ, ಜುಲೈ 2, 2022
25 °C

ಪಿಎಸ್‌ಐ ಅಕ್ರಮ: ಮತ್ತಷ್ಟು ಮಂದಿ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪೌಲ್ ಅವರನ್ನು ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು, ಅವರ ಹೇಳಿಕೆ ಆಧರಿಸಿ ಮತ್ತಷ್ಟು ಮಂದಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಪಿಎಸ್ಐ ನೇಮಕಾತಿ ಜವಾಬ್ದಾರಿ ವಹಿಸಿಕೊಂಡಿದ್ದ ವಿಭಾಗವೇ ಅಕ್ರಮದ ಕೇಂದ್ರವೆಂಬುದು ಸಿಐಡಿ ತನಿಖೆಯಿಂದ ಈಗಾಗಲೇ ಬಯಲಾಗಿತ್ತು. ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಹಾಗೂ ನೌಕರರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

‘ನೇಮಕಾತಿ ವಿಭಾಗ ನೌಕರರ ಕೃತ್ಯದಲ್ಲಿ ಎಡಿಜಿಪಿ ಪಾತ್ರವಿರುವ ಮಾಹಿತಿ ಇದೆ. ಅವರನ್ನು ಇತ್ತೀಚೆಗೆ ಎರಡು ದಿನ ವಿಚಾರಣೆ ನಡೆಸಲಾಗಿದೆ. ಪುನಃ ವಿಚಾರಣೆಗೆ ಬರುವಂತೆ ಶೀಘ್ರವೇ ನೋಟಿಸ್ ನೀಡಲಾಗುವುದು. ಈಗಾಗಲೇ ನೀಡಿರುವ ಹೇಳಿಕೆಯಲ್ಲಿ ಉಲ್ಲೇಖವಿರುವ ವ್ಯಕ್ತಿಗಳನ್ನೂ ವಿಚಾರಣೆ ಮಾಡಲಾಗುತ್ತಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಪ್ರಕರಣ ಭೇದಿಸಲು ಹಲವು ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೆಂಗಳೂರು ಹಾಗೂ ಹೊರ ಜಿಲ್ಲೆಗಳಲ್ಲೂ ಹಲವರನ್ನು ವಿಚಾರಣೆ ನಡೆಸಿ, ಮಾಹಿತಿ ಕಲೆಹಾಕಲಾಗುತ್ತಿದೆ. ಸೂಕ್ತ ಪುರಾವೆಗಳನ್ನು ಆಧಾರವಾಗಿಟ್ಟುಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ತಿಳಿಸಿವೆ.

ಮಧ್ಯವರ್ತಿಗಳ ಮೇಲೆ ನಿಗಾ: ‘ಕೆಲ ಪೊಲೀಸರು, ಕೆಲ ರಾಜಕಾರಣಿಗಳು ಹಾಗೂ ಇತರರು, ಪ್ರಕರಣದಲ್ಲಿ ಮಧ್ಯವರ್ತಿಗಳಾಗಿ ಕೆಲಸ ಮಾಡಿದ್ದಾರೆ. ಅಂಥವರ ಪಟ್ಟಿ ಸಿದ್ಧಪಡಿಸಲಾಗಿದ್ದು, ಅವರೆಲ್ಲರ ಮೇಲೆ ನಿಗಾ ವಹಿಸಲಾಗಿದೆ’ ಎಂದೂ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು