ಶುಕ್ರವಾರ, ಫೆಬ್ರವರಿ 3, 2023
23 °C

ಕೆಜಿಎಫ್ ಸಂಗೀತ ಬಳಕೆ| ಹಕ್ಕು ಸ್ವಾಮ್ಯ ಉಲ್ಲಂಘನೆ ಆರೋಪ: ರಾಹುಲ್‌ಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೆಜಿಎಫ್ ಚಾಪ್ಟರ್-2 ಚಿತ್ರದ ಹಾಡಿನ ಸಂಗೀತವನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದು ಹಾಕುವಂತೆ ನ್ಯಾಯಾಲಯ ನೀಡಿದ್ದ ಆದೇಶ ಪಾಲಿಸಿಲ್ಲ’ ಎಂಬ ಆರೋಪದಡಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಸಂಸದ ರಾಹುಲ್ ಗಾಂಧಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಹಾಡುಗಳ ಹಕ್ಕು ಸ್ವಾಮ್ಯ ಹೊಂದಿರುವ ಎಂಆರ್‌ಟಿ ಮ್ಯೂಸಿಕ್ ಕಂಪನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಆರೋಪಿಗಳಾದ ರಾಹುಲ್ ಗಾಂಧಿ, ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಮುಖ್ಯಸ್ಥ ಜೈರಾಂ ರಮೇಶ್ ಹಾಗೂ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಥೆ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು 2023ರ ಜನವರಿ12ಕ್ಕೆ ಮುಂದೂಡಿದೆ.

ಪ್ರಕರಣವೇನು?: ಹಕ್ಕುಸ್ವಾಮ್ಯ ಉಲ್ಲಂಘಿಸಿ ಕೆಜಿಎಫ್ ಚಿತ್ರದ ಹಾಡು ಬಳಸಿಕೊಂಡ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಮತ್ತು ಭಾರತ್ ಜೋಡೊ ಯಾತ್ರೆಯ ಅಧಿಕೃತ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ನವೆಂಬರ್ 7ರಂದು ಟ್ವಿಟರ್ ಕಂಪನಿಗೆ ನಗರದ ವಾಣಿಜ್ಯ ನ್ಯಾಯಾಲಯ ಆದೇಶಿಸಿತ್ತು.

ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ಕಾಂಗ್ರೆಸ್, ‘ವಿವಾದಿತ ಹಾಡನ್ನು ಪಕ್ಷದ ಎಲ್ಲ ಸಾಮಾಜಿಕ ಜಾಲತಾಣಗಳಿಂದ ತೆಗೆದು ಹಾಕಲಾಗುವುದು, ಅದರ ಸ್ಕ್ರೀನ್‌ ಶಾಟ್‌ಗಳನ್ನು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಗೆ ಒದಗಿಸಲಾಗುವುದು’ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿತ್ತು.

ಇದನ್ನು ಪರಿಗಣಿಸಿದ್ದ ಹೈಕೋರ್ಟ್ ವಿವಾದಿತ ಹಾಡನ್ನು ತೆಗೆದು ಹಾಕಬೇಕೆಂಬ ಷರತ್ತಿಗೆ ಒಳಪಟ್ಟಂತೆ ವಾಣಿಜ್ಯ ಕೋರ್ಟ್ ಆದೇಶವನ್ನು ರದ್ದುಪಡಿಸಿ ನವೆಂಬರ್ 8ರಂದು ಆದೇಶಿಸಿತ್ತು. ಆದರೆ, ಈವರೆಗೂ ಹಾಡುಗಳನ್ನು ತೆಗೆಯದೇ ಹೈಕೋರ್ಟ್ ಆದೇಶ ಉಲ್ಲಂಘಿಸಲಾಗಿದೆ ಎಂದು ಎಂಆರ್‌ಟಿ ಮ್ಯೂಸಿಕ್ ಕಂಪನಿ ಆರೋಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು