ಬುಧವಾರ, ಮಾರ್ಚ್ 29, 2023
32 °C

ರಾಜ್ಯದಲ್ಲಿ ನ.11ರವರೆಗೆ ಮಳೆ ತಗ್ಗುವ ಸಾಧ್ಯತೆ: ಹವಾಮಾನ ಇಲಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಕ್ಷ ದ್ವೀಪದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪ್ರಬಲತೆ ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ನ.11ರವರೆಗೆ ಮಳೆ ತಗ್ಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ವಾಯುಭಾರ ಕುಸಿತ ಪ್ರಬಲವಾಗಿದ್ದರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳು ಹೆಚ್ಚು ಮಳೆಯಾಗಿತ್ತು. ಅದರ ಪ್ರಭಾವ ತಗ್ಗಿರುವುದರಿಂದ ಮಳೆ ತುಸು ಬಿಡುವು ಪಡೆದುಕೊಳ್ಳಲಿದೆ’ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ವಿವರಿಸಿದರು.

‘ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಮುನ್ಸೂಚನೆಗಳು ಕಂಡುಬಂದಿವೆ. ಇದು ತಮಿಳುನಾಡು ಕರಾವಳಿಗೂ ವ್ಯಾಪಿಸುವುದರಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನ.11ರಿಂದ ಮತ್ತೆ ಹೆಚ್ಚಾಗಬಹುದು’ ಎಂದರು.

‘ಎರಡು ದಿನಗಳಿಂದ ಗರಿಷ್ಠ ತಾಪಮಾನದ ಪ್ರಮಾಣವೂ ಕುಸಿತ ಕಂಡಿದ್ದು, ಸರಾಸರಿ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಇದರಿಂದ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ. ಜಿಟಿಜಿಟಿ ಮಳೆ, ಮೋಡ ಕವಿದ ವಾತಾವರಣದಿಂದ ಬಿಸಿಲು ಮರೆಯಾಗಿದೆ. ಮುಂದಿನ ಎರಡು ದಿನಗಳವರೆಗೆ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ’ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ 11ರಂದು ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು