ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡಿಗೆ ಅಡಿ ಇಟ್ಟ ಮುಂಗಾರು: 22 ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ

Last Updated 4 ಜೂನ್ 2021, 23:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿರುವುದರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಮುಂಗಾರು ಜೂ.5ರ ನಂತರ ರಾಜ್ಯ ಪ್ರವೇಶಿಸುವುದಾಗಿ ನಿರೀಕ್ಷಿಸಲಾಗಿತ್ತು. ಮುಂಗಾರು ಮಾರುತಗಳು ಒಂದು ದಿನ ಮುನ್ನವೇ ರಾಜ್ಯವನ್ನು ಪ್ರವೇಶಿಸಿವೆ. ಇದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರ (ಜೂ.4) ಧಾರಾಕಾರ ಮಳೆಯಾಗಿದೆ. ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರವೇಶಿಸಿರುವ ಮುಂಗಾರು, ಉತ್ತರ ಒಳನಾಡಿಗೆ ಶನಿವಾರ ಪ್ರವೇಶಿಸಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶನಿವಾರ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ’ ಎಂದರು.

‘ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಜೂ.5 ಮತ್ತು 6ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ’ ಎಂದವರು ತಿಳಿಸಿದರು.

‘ಕರಾವಳಿಯಲ್ಲಿ ಮಳೆ ತೀವ್ರಗೊಳ್ಳುವ ಸೂಚನೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಜೂ.6ರ ಬಳಿಕ ಮಳೆ ತಾತ್ಕಾಲಿಕವಾಗಿ ಬಿಡುವು ಪಡೆಯಲಿದೆ. ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆ ನಿರೀಕ್ಷಿಸಲಾಗಿದೆ’ ಎಂದೂ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT