ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: ಆರು ಅಭ್ಯರ್ಥಿಗಳು ಕಣದಲ್ಲಿ

Last Updated 3 ಜೂನ್ 2022, 11:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಸ್ಪರ್ಧಿಸಿರುವ ಎಲ್ಲ ಆರು ಅಭ್ಯರ್ಥಿಗಳೂ ಕಣದಲ್ಲಿ ಮುಂದುವರಿದಿದ್ದು, ಜೂನ್‌ 10ರಂದು ಮತದಾನದ ಬಳಿಕವೇ ಫಲಿತಾಂಶ ನಿರ್ಧಾರವಾಗಲಿದೆ.

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ಕು ಸದಸ್ಯರನ್ನು ಆಯ್ಕೆಮಾಡಲು ಅವಕಾಶವಿದೆ. ಬಿಜೆಪಿ ಎರಡು ಮತ್ತು ಕಾಂಗ್ರೆಸ್‌ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದು. ಜೆಡಿಎಸ್‌ಗೆ ಒಂದು ಸ್ಥಾನ ಗಳಿಸುವುದಕ್ಕೂ ಮತಗಳ ಕೊರತೆ ಇದೆ. ಹೀಗಾಗಿ ನಾಲ್ಕನೇ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಯುತ್ತಿದೆ. ಬಿಜೆಪಿಯಿಂದ ಮೂವರು, ಕಾಂಗ್ರೆಸ್‌ನ ಇಬ್ಬರು ಮತ್ತು ಜೆಡಿಎಸ್‌ನ ಒಬ್ಬ ಅಭ್ಯರ್ಥಿ ಕಣದಲ್ಲಿದ್ದಾರೆ.

ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಚಿತ್ರನಟ ಜಗ್ಗೇಶ್‌, ವಿಧಾನ ಪರಿಷತ್‌ನ ಮಾಜಿ ಸದಸ್ಯ ಲಹರ್ ಸಿಂಗ್‌ ಸಿರೋಯ, ಕಾಂಗ್ರೆಸ್‌ನಿಂದ ರಾಜ್ಯಸಭೆಯ ಹಾಲಿ ಸದಸ್ಯ ಜೈರಾಂ ರಮೇಶ್‌, ಪಕ್ಷದ ಹಿರಿಯ ಮುಖಂಡ ಕೆ. ರೆಹಮಾನ್‌ ಖಾನ್‌ ಅವರ ಮಗ ಮನ್ಸೂರ್‌ ಅಲಿ ಖಾನ್‌ ಅಭ್ಯರ್ಥಿಗಳಾಗಿದ್ದಾರೆ. ಜೆಡಿಎಸ್‌ ಅಭ್ಯರ್ಥಿಯಾಗಿ ರಾಜ್ಯಸಭೆಯ ಮಾಜಿ ಸದಸ್ಯ ಡಿ. ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಶುಕ್ರವಾರ ಮಧ್ಯಾಹ್ನ ಮೂರು ಗಂಟೆಯವರೆಗೂ ಕಾಲಾವಕಾಶವಿತ್ತು. ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್‌ ಅಲಿ ಖಾನ್‌ ಅವರ ನಾಮಪತ್ರವನ್ನು ಹಿಂಪಡೆದು ತಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರನ್ನು ಬೆಂಬಲಿಸುವಂತೆ ಜೆಡಿಎಸ್‌ ನಾಯಕರು ಕಾಂಗ್ರೆಸ್‌ ಪಕ್ಷದ ವರಿಷ್ಠರ ಬಳಿ ಬೇಡಿಕೆ ಇಟ್ಟಿದ್ದರು. ಹೀಗಾಗಿ ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಬದಲಾವಣೆಗಳಾಗಬಹುದು ಎಂಬ ಕುತೂಹಲ ಗರಿಗೆದರಿತ್ತು.

‘ಯಾವುದೇ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿಲ್ಲ. ಎಲ್ಲ ಆರು ಅಭ್ಯರ್ಥಿಗಳೂ ಕಣದಲ್ಲಿ ಮುಂದುವರಿದಿದ್ದಾರೆ. ಜೂನ್‌ 10ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ’ ಎಂದು ಚುನಾವಣಾಧಿಕಾರಿಯಾಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT