ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ: ಬಾಲಚಂದ್ರ ಜಾರಕಿಹೊಳಿ ಹೇಳಿದ್ದೇನು?

Last Updated 3 ಮಾರ್ಚ್ 2021, 5:47 IST
ಅಕ್ಷರ ಗಾತ್ರ

ಬೆಂಗಳೂರು: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಯುವತಿಯ ಜತೆ ಏಕಾಂತದಲ್ಲಿ ಇರುವ ವಿಡಿಯೊ, ಆಡಿಯೊ ತುಣುಕುಗಳ ಸಿ.ಡಿ ವಿವಾದಕ್ಕೆ ಸಂಬಂಧಿಸಿದಂತೆ ಬಾಲಚಂದ್ರ ಜಾರಕಿಹೊಳಿ ಬುಧವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಾತುಕತೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, 'ಸಿ.ಡಿ ಬಿಡುಗಡೆ ಮಾಡಿರುವ ವ್ಯಕ್ತಿ ಯಾರು, ಅದರ ಹಿಂದಿರುವ ಹುಡುಗಿ ಯಾರು, ಅವರ ಕುಟುಂಬ ಯಾವುದು, ಅದರ ಹಿಂದಿರುವ ಪ್ರಭಾವಿ ರಾಜಕಾರಣಿಗಳು ಯಾರು ಎಂಬುದು ಜನತೆ ಗೊತ್ತಾಗಬೇಕಿದೆ. ಅದಕ್ಕಾಗಿ ತನಿಖೆ ಆಗಬೇಕೆಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದೇನೆ' ಎಂದರು.

ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಅವರ ತಮ್ಮ ಹಾಗೂ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.

'ಇದೊಂದು ನಕಲಿ‌ ಸಿ.ಡಿಯಾಗಿದೆ. ಈ ಬಗ್ಗೆ ಸಿಬಿಐ ಅಥವಾ ಸಿಐಡಿ ತನಿಖೆಯಾಗಬೇಕು. ರಮೇಶ ಜಾರಕಿಹೊಳಿ ರಾಜೀನಾಮೆ ಅಗತ್ಯವಿಲ್ಲ. ಸಿ.ಡಿ ಬಿಡುಗಡೆ ಹಿಂದೆ ಪ್ರಭಾವಿಗಳ ಕೈವಾಡವಿದೆ. ಸಿ.ಡಿ ಬಿಡುಗಡೆ ಮಾಡಿರುವ ವ್ಯಕ್ತಿ ವಿರುದ್ದ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವ ಕುರಿತು ವಕೀಲರ ಜತೆ ಮಾತುಕತೆ ನಡೆಸಲಾಗುತ್ತಿದೆ. ಪ್ರಕರಣದ ಸಮಗ್ರ ತನಿಖೆಯಾಗಬೇಕಿದೆ. ಈ ರೀತಿ ಸಿ.ಡಿಗಳನ್ನು ಗಂಭೀರವಾಗಿ ಪರಿಗಣಿಸಿಕೊಂಡು ಹೋದರೆ ರಾಜಕಾರಣ ಮಾಡುವುದೇ ಕಷ್ಟವಾಗುತ್ತದೆ. ಜಾರಕಿಹೊಳಿ ಕುಟುಂಬದ ವಿರುದ್ದ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಈ ಘಟನೆಯ ಬಗ್ಗೆ ಸತ್ಯಾಸತ್ಯತೆ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಸಿಎಂಗೆ ಮನವಿ ಮಾಡಲಾಗಿದೆ. ಈ ಬಗ್ಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ' ಎಂದರು.

'ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಇದ್ದಾರೆ. ದೆಹಲಿಗೆ ಹೋಗುತ್ತಿಲ್ಲ. ಪ್ರಕರಣದ ವಿಡಿಯೊಗಳನ್ನು ಯೂಟ್ಯೂಬ್‌ಗೆ ವಿದೇಶಗಳಿಂದ ಅಪ್ಲೋಡ್ ಮಾಡಿರುವ ಮಾಹಿತಿಗಳಿವೆ. ಹೀಗಾಗಿ ಸಿಬಿಐ ತನಿಖೆಗೆ ಒತ್ತಾಯ ಮಾಡಿದ್ದೇವೆ. ನಾವು ಸಹ ಕಾನೂನು ಹೋರಾಟ ಮಾಡುತ್ತೇವೆ' ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT