ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಮೂರನೇ ಅಲೆ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ: ಬಿ.ಎಸ್‌.ಯಡಿಯೂರಪ್ಪ

Last Updated 3 ಜುಲೈ 2021, 12:56 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ ಮೂರನೇ ಅಲೆ ಎದುರಿಸಲು ಸರ್ಕಾರ ಸರ್ವ ಸನ್ನದ್ಧವಾಗಿದೆ. ಅಗತ್ಯ ವೈದ್ಯಕೀಯ ಮೂಲ ಸೌಕರ್ಯ ಸುಧಾರಿಸಲು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿ.ಕೆ.ರಾಮಮೂರ್ತಿ ನೇತೃತ್ವದಲ್ಲಿ ಶನಿವಾರ ಜಯನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್‌ ವಿತರಣೆ ಹಾಗೂ ಕೋವಿಡ್‌ ಸೇನಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೋವಿಡ್‌ ಸಾಂಕ್ರಾಮಿಕ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ವೈದ್ಯಕೀಯ ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗಿದೆ.ಲಸಿಕಾ ಅಭಿಯಾನ ಭರದಿಂದ ಸಾಗುತ್ತಿದ್ದು, ಪ್ರತಿನಿತ್ಯ 3 ರಿಂದ4 ಲಕ್ಷ ಮಂದಿಗೆ ಲಸಿಕೆ ನೀಡಲಾಗುತ್ತಿದೆ. ಇನ್ನೂ ಹೆಚ್ಚು ಮಂದಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

‘ಕೋವಿಡ್‌ನಿಂದ ಹಲವು ಸಂಕಷ್ಟಗಳು ಸೃಷ್ಟಿಯಾಗಿದ್ದು, ಆರ್ಥಿಕವಾಗಿ ಹಿಂದುಳಿದವರಿಗೆ ತುಂಬಾ ತೊಂದರೆಯಾಗಿದೆ. ಇದನ್ನು ಮನಗಂಡು ನಮ್ಮ ಸರ್ಕಾರವು₹2,050 ಕೋಟಿ ಪ್ಯಾಕೇಜ್‌ ಪ್ರಕಟಿಸಿದೆ. ರೈತರು, ತರಕಾರಿ ಹಾಗೂ ಹೂವು ಬೆಳೆಗಾರರು, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್‌ ಚಾಲಕರು, ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಹಾಗೂ ಕಲಾವಿದರಿಗೆ ಆರ್ಥಿಕ ನೆರವು ಒದಗಿಸಲಾಗಿದೆ. ಈಗಾಗಲೇ ನೇರವಾಗಿ ಅವರ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ’ ಎಂದು ತಿಳಿಸಿದರು.

‘ಸಿ.ಕೆ.ರಾಮಮೂರ್ತಿ ಅವರು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ. ಅವರು ಮೊದಲ ಅಲೆಯ ವೇಳೆಯೂ ಸಾವಿರಾರು ಮಂದಿಗೆ ಕಿಟ್‌ ಕೊಟ್ಟಿದ್ದರು. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಕೋವಿಡ್‌ ಸೇನಾನಿಗಳ ಪಾತ್ರ ಮಹತ್ವದ್ದಾಗಿದೆ. ವೈದ್ಯರು, ಶುಶ್ರೂಷಕಿಯರು, ಪೊಲೀಸರು ಹಾಗೂ ಪೌರ ಕಾರ್ಮಿಕರು ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಅಭಿನಂದನೆಗಳು’ ಎಂದರು.

ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ, ಅವಧೂತ ವಿನಯ್‌ ಗುರೂಜಿ ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಇಳಿ ವಯಸ್ಸಿನಲ್ಲೂ ಸರ್ಕಾರವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಕೋವಿಡ್‌ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಬಿಕ್ಕಟ್ಟಿನ ಸಮಯದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಸಚಿವರು ಹಾಗೂ ಪಾಲಿಕೆಯ ಮಾಜಿ ಸದಸ್ಯರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಜನರು ಸರ್ಕಾರ ಹಾಗೂ ಮಂತ್ರಿಗಳನ್ನು ದೂರುತ್ತಾ ಕೂರುವ ಬದಲು ತಮ್ಮ ಜವಾಬ್ದಾರಿ ಅರಿತುಕೊಂಡು ಪರಿವರ್ತನೆಗೆ ನೆರವಾಗಬೇಕು. ಕೋವಿಡ್‌ನಿಂದಾಗಿ ತಂದೆ ತಾಯಿಯನ್ನು ಕಳೆದುಕೊಂಡು ಅನಾಥವಾಗಿರುವ ಮಕ್ಕಳಿಗಾಗಿ ಐಟಿ ಉದ್ಯೋಗಿಗಳು ಕನಿಷ್ಟ ₹5 ಸಾವಿರ ನೀಡಿದರೆ ಅನುಕೂಲ. ಪಿತೃಶಾಪ ನಿವಾರಣೆಗಾಗಿ ನಾವು ಗೋಕರ್ಣಕ್ಕೆ ಹೋಗಿ ಪೂಜೆ ಮಾಡಿಸುತ್ತೇವೆ. ಆ ಹಣವನ್ನು ಅನಾಥ ಮಕ್ಕಳಿಗೆ ಮೀಸಲಿಟ್ಟರೆ ಕರ್ನಾಟಕವು ನಿಜವಾದ ಧರ್ಮಸ್ಥಳವಾಗಲಿದೆ’ ಎಂದು ತಿಳಿಸಿದರು.

ಸಚಿವ ಆರ್‌.ಅಶೋಕ, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್‌.ಆರ್‌.ರಮೇಶ್‌, ಪಾಲಿಕೆ ಮಾಜಿ ಸದಸ್ಯೆ ನಾಗರತ್ನ ರಾಮಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT