ಗುರುವಾರ , ಮೇ 13, 2021
34 °C

ಒಕ್ಕಲಿಗರ ಸಂಘದ ಚುನಾವಣೆ ಮುಂದೂಡಲು ಶಿಫಾರಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್‌ ಕಾರಣ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಮುಂದೂಡಲು ನಿರ್ಧರಿಸಿದ್ದು, ಈ ಸಂಬಂಧ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಚುನಾವಣಾಧಿಕಾರಿ ಪಿ.ಎನ್‌.ರವೀಂದ್ರ ಅವರು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಪತ್ರ ಬರೆದಿದ್ದಾರೆ.

‘ಕೆಂಪೇಗೌಡ ವೈದ್ಯಕೀಯ ಸಂಶೋಧನಾ ಸಂಸ್ಥೆಯ (ಕಿಮ್ಸ್‌) ಆವರಣದಲ್ಲಿರುವ ಒಕ್ಕಲಿಗರ ಸಂಘದ ಕೇಂದ್ರ ಕಚೇರಿಯಲ್ಲಿ ಚುನಾವಣಾಧಿಕಾರಿಗಳ ಕಚೇರಿ ತೆರೆಯಲಾಗಿದೆ. ಸಾರ್ವಜನಿಕರು, ಸಂಘದ ಸದಸ್ಯರು ಹಾಗೂ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸುವವರು ಇಲ್ಲಿಗೆ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ. ಕಿಮ್ಸ್‌ ಆಸ್ಪತ್ರೆಯಲ್ಲಿ ಕೋವಿಡ್‌ ಪೀಡಿತರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಕೋವಿಡ್‌ ಹರಡುವ ಅಪಾಯ ಹೆಚ್ಚಿದೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರೂ ಆಗಿರುವ ರವೀಂದ್ರ ಪತ್ರದಲ್ಲಿ ತಿಳಿಸಿದ್ದಾರೆ.

‘ಸುಮಾರು 1.90 ಲಕ್ಷ ಮತದಾರರ ಪೈಕಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಜಿಲ್ಲೆಗಳಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸಬೇಕಿರುವುದರಿಂದ ಸಾಕಷ್ಟು ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕಾಗುತ್ತದೆ. ಮತ ಎಣಿಕೆಯ ಸಂದರ್ಭದಲ್ಲಿ ಸಿಬ್ಬಂದಿ ಹಗಲು ರಾತ್ರಿ ಕೆಲಸ ಮಾಡಬೇಕಾಗುತ್ತದೆ. ಹೀಗಾಗಿ ಮತದಾರರು, ಅಭ್ಯರ್ಥಿಗಳು ಹಾಗೂ ಅಧಿಕಾರಿಗಳ ಹಿತದೃಷ್ಟಿಯಿಂದ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈಗಾಗಲೇ ಹೊರಡಿಸಿರುವ ಅಧಿಸೂಚನೆಯನ್ನು ತಾತ್ಕಾಲಿಕವಾಗಿ ಹಿಂಪಡೆದು ಚುನಾವಣೆ ಮುಂದೂಡಬೇಕು. ಕೋವಿಡ್‌ ಪರಿಸ್ಥಿತಿ ಅವಲೋಕಿಸಿ ಚುನಾವಣೆ ಪ್ರಕ್ರಿಯೆ ನಡೆಸುವ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು