ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ 2 ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಸುರೇಶ್ ಕುಮಾರ್

ಬಾಕಿ ಕಡತ ಶೀಘ್ರ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚನೆ
Last Updated 27 ಜನವರಿ 2021, 12:08 IST
ಅಕ್ಷರ ಗಾತ್ರ

ಬೆಂಗಳೂರು: ’ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಸ್ತರಗಳ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಬುಧವಾರ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ ಸಚಿವರು, ‘ಶಿಕ್ಷಕ ಮಿತ್ರ ಆ್ಯಪ್ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ತಂತ್ರಜ್ಞಾನದ ಪರಿಹಾರ, 2,500 ಟಿಜಿಟಿ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ’ ಎಂದರು.

‘ಕಳೆದ ಒಂದು ವರ್ಷದಲ್ಲಿ 3,008 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 2,404 ಪ್ರೌಢಶಾಲಾ ಶಿಕ್ಷಕರಾಗಿ, 1,342 ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 396 ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ, 40 ಮಂದಿ ಪ್ರಾಂಶುಪಾಲರಿಗೆ ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕರಾಗಿ ಬಡ್ತಿ, 200ಕ್ಕೂ ಹೆಚ್ಚು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಡ್ತಿ ಸೇರಿದಂತೆ ಹಲವು ವರ್ಷಗಳಿಂದ ಬಾಕಿ ಇದ್ದ ಪದೋನ್ನತಿಗಳನ್ನು ಪೂರ್ಣಗೊಳಿಸಲಾಗಿದೆ’ ಎಂದರು.

ಶಿಕ್ಷಣ ಇಲಾಖೆಯ ನೌಕರರ ಸಂಘಗಳ ಬೇಡಿಕೆ ಮತ್ತು ಎಲ್ಲ ಸಮಸ್ಯೆಗಳನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಂದಿಟ್ಟರು. ಆಗ ಸಚಿವರು, ಶಿಕ್ಷಕರ ಮತ್ತು ನೌಕರರ ಬೇಡಿಕೆಗಳ ಈಡೇರಿಸಿರುವುದರ ವಿವರಗಳನ್ನು ಒದಗಿಸಿದರು. ಕಳೆದ ಒಂದೂಕಾಲು ವರ್ಷದಲ್ಲಿ ನನೆಗುದಿಗೆ ಬಿದ್ದಿದ್ದ ವಿವಿಧ ವೃಂದದ ಪದೋನ್ನತಿಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸಚಿವಾಲಯ, ಆಯುಕ್ತಾಲಯ ಮತ್ತು ನಿರ್ದೇಶನಾಲಯಗಳಲ್ಲಿ ದೀರ್ಘ ಅವಧಿಯಿಂದ ಬಾಕಿ ಉಳಿದಿರುವ ಆಡಳಿತಾತ್ಮಕ, ನೌಕರರ ಸೇವಾ ವಿಷಯಗಳ ಮತ್ತು ಶಿಕ್ಷಣ ಇಲಾಖೆಯ ವಿವಿಧ ನೌಕರರ ಸಂಘಗಳ ಬೇಡಿಕೆಗಳ ಇತ್ಯರ್ಥಕ್ಕೆ ಮತ್ತು ಇಂಥ ಸಮಸ್ಯೆಗಳ ಕಡತಗಳ ಶೀಘ್ರ ವಿಲೇವಾರಿ ಕ್ರಮ ತೆಗೆದುಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

‘ಶಿಕ್ಷಕ ಮತ್ತು ಶಿಕ್ಷಕೇತರ ನೌಕರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಇತ್ಯರ್ಥಪಡಿಸಬಹುದಾದ ಮತ್ತು ಆರ್ಥಿಕವಾಗಿ ಹೊರೆಯಾಗದಂಥ ಸಮಸ್ಯೆಗಳ ಶೀಘ್ರ ಈಡೇರಿಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಿವಿಧ ಸ್ತರಗಳಲ್ಲಿ ಬಾಕಿ ಇರುವ ಹಲವು ಸಮಸ್ಯೆಗಳನ್ನು ವಿಭಾಗಿಸಿ ಪ್ರತ್ಯೇಕ ವರದಿಯೊಂದಿಗೆ ಪ್ರಸ್ತಾವನೆ ಸಲ್ಲಿಸಬೇಕು. ಅರ್ಹ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ವಹಿಸಬೇಕು’ ಎಂದೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಶಿಕ್ಷಕರ ವರ್ಗಾವಣೆ, ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣೆ, ವೃಂದ ನೇಮಕಾತಿ ನಿಯಮಗಳ ಪರಿಷ್ಕರಣೆ, ನೇರ ನೇಮಕಾತಿ, ಪದನಾಮ ಪರಿಷ್ಕರಣೆ, ಕಾಲಮಿತಿ ಬಡ್ತಿ, ವೇತನ ತಾರತಮ್ಯ, ಬಡ್ತಿ ಹೊಂದಿದ ಶಿಕ್ಷಕರು ಮತ್ತು ಉಪನ್ಯಾಸಕರ ವೇತನದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವುದು ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ನೌಕರರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಪ್ರತ್ಯೇಕವಾಗಿ ಮತ್ತು ಸಂಘಟನೆವಾರು ಪ್ರಸ್ತಾವನೆ ಮಂಡಿಸಬೇಕು’ ಎಂದೂ ಸೂಚಿಸಿದರು.

ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ಹೊಂದಿದ ಶಿಕ್ಷಕರು ಪ್ರಾಥಮಿಕ ಶಾಲಾ ಶಿಕ್ಷಕರಿಗಿಂತ ಕಡಿಮೆ ವೇತನ ಪಡೆಯುವಂತಾಗಿರುವುದು, ಪ್ರೌಢಶಾಲೆಯಿಂದ ಪದವಿ ಪೂರ್ವ ಉಪನ್ಯಾಸಕರಾಗಿ ಬಡ್ತಿ ಹೊಂದಿದವರಿಗೆ ಪ್ರೌಢಶಾಲೆ ಶಿಕ್ಷಕರಿಗಿಂತ ಕಡಿಮೆ ವೇತನ ಇರುವುದು ಸೇರಿದಂತೆ ವೇತನ ತಾರತಮ್ಯ, ಬಡ್ತಿ ತಾರತಮ್ಯ ನಿವಾರಣೆ, ಪದನಾಮ ಬದಲಾವಣೆ, ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಒಂದೇ ಒಂದು ಬಡ್ತಿಯಿಲ್ಲದೇ ನಿವೃತ್ತಿಯಾಗುವುದು ಸೇರಿದಂತೆ ಹಲವು ಬೇಡಿಕೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ವೃತ್ತಿ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಪ್ರೌಢ ಶಾಲಾ ಬಡ್ತಿ ಶಿಕ್ಷಕರ ಸಂಘ, ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೇದಿಕೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಗ್ರೇಡ್-1 ಮತ್ತು ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕ ವೃಂದದ ಶಿಕ್ಷಕರ ಸಂಘ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರ ಸಂಘ, ಪ್ರೌಢಶಾಲಾ ಗ್ರೇಡ್-1 ಮತ್ತು ಗ್ರೇಡ್-2 ವೃತ್ತಿಶಿಕ್ಷಕರ ಸಂಘಗಳು ಸೇರಿದಂತೆ ವಿವಿಧ ನೌಕರರ ಸಂಘಗಳ ಪದಾಧಿಕಾರಿಗಳು ಸಭೆಯಲ್ಲಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಕೂಡಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT