ಭಾನುವಾರ, ಫೆಬ್ರವರಿ 5, 2023
21 °C

ಅತ್ಯಾಚಾರಿಗಳ ಬಿಡುಗಡೆ ಖಂಡನೀಯ: ಜನವಾದಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ 11 ಮಂದಿ ಅಪರಾಧಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸದಸ್ಯರು ಬಸವನಗುಡಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ಎಸ್. ವಿಮಲಾ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು, ದೇಶದ ಪ್ರಗತಿಗೆ ಮಹಿಳೆಯರ ಕುರಿತು ಗೌರವದ ಭಾವನೆ ಅತ್ಯಗತ್ಯ. ಅವರ ಘನತೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುವ ಪ್ರತಿಜ್ಞೆ ಮಾಡೋಣ ಎಂದು ಕರೆ ನೀಡಿದ ಸಂದರ್ಭದಲ್ಲೇ ಅವರ ತವರು ರಾಜ್ಯದಲ್ಲಿ ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿರುವುದು ದುರಂತವೇ ಸರಿ’ ಎಂದು ಬೇಸರ ವ್ಯಕ್ತಪಡಿಸಿದರು.

‘2018ರಲ್ಲಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಕೈಗೊಂಡ ತೀರ್ಮಾನದ ಪ್ರಕಾರ ಮರಣ ದಂಡನೆ, ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕೈದಿಗಳು ಸನ್ನಡತೆಯ ಆಧಾರದ ಮೇಲೆ ಬಿಡುಗಡೆಗೆ ಅರ್ಹರಲ್ಲ ಎಂದು ಆದೇಶ ನೀಡಲಾಗಿತ್ತು. ಆದರೆ ಗುಜರಾತ್ ಸರ್ಕಾರ ಇದೆಲ್ಲವನ್ನು ಧಿಕ್ಕರಿಸಿ ಬಿಡುಗಡೆ ಮಾಡಿರುವುದು ಮಹಿಳಾ ಸಮುದಾಯಕ್ಕೆ ಮಾಡಿದ ಅಪಮಾನ’ ಎಂದು ಆಕ್ರೋಶ ವ್ಯಕ್ತ
ಪಡಿಸಿದರು.

‘ಬಿಡುಗಡೆ ಮಾಡಿದ ಎಲ್ಲಾ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳಿಸಿ, ಉಗ್ರ ಶಿಕ್ಷೆ ವಿಧಿಸಲು ಸುಪ್ರೀಂ ಕೋರ್ಟ್ ಮುಂದಾಗಬೇಕು’ ಎಂದು ಒತ್ತಾಯಿಸಿದರು.

‘ರಾಜಸ್ಥಾನದ ಶಾಲೆಯಲ್ಲಿ ಕುಡಿಯುವ ನೀರಿನ ಮಡಕೆ ಮುಟ್ಟಿದ ಪರಿಶಿಷ್ಟ ಜಾತಿಯ ಬಾಲಕನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯ. ಕೂಡಲೇ ಆರೋಪಿಗೆ ಉಗ್ರ ಶಿಕ್ಷೆ ನೀಡಬೇಕು’ ಎಂದು ಸಮುದಾಯ ಕರ್ನಾಟಕ ಸಾಂಸ್ಕೃತಿಕ ಸಂಘಟನೆಯ ಟಿ.ಸುರೇಂದ್ರ ರಾವ್ ಆಗ್ರಹಿಸಿದರು.

ದಕ್ಷಿಣ ಜಿಲ್ಲಾ ಸಮಿತಿಯ ಅಧ್ಯಕ್ಷೆ ಬಸಮ್ಮ ಮತ್ತು ಕಾರ್ಯದರ್ಶಿ ಪಾರ್ವತಿ, ಸುನಂದಾ, ಶ್ರೀಮತಿ ಕೆ. ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು