ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು| ಉಳಿಪಾಡಿ ಮಸೀದಿ ಪರವಾನಗಿ ರದ್ದತಿಗೆ ವಿಎಚ್‌ಪಿ ಒತ್ತಾಯ

ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ದೇವಸ್ಥಾನದ ಕುರುಹು ಪತ್ತೆ
Last Updated 22 ಏಪ್ರಿಲ್ 2022, 13:00 IST
ಅಕ್ಷರ ಗಾತ್ರ

ಮಂಗಳೂರು: ‘ತಾಲ್ಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನದ ಕುರುಹು ಪತ್ತೆಯಾಗಿದ್ದು, ಮಸೀದಿ ಪರವಾನಗಿ ರದ್ದುಪಡಿಸಬೇಕು ಮತ್ತು ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಸಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ಗಂಜಿಮಠ ಪಂಚಾಯಿತಿ ವ್ಯಾಪ್ತಿಯ ತೆಂಕ ಉಳಿಪಾಡಿ ಗ್ರಾಮದ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿ ಕಟ್ಟಡ ನವೀಕರಣದ ವೇಳೆ ಮಸೀದಿ ಅರ್ಧ ಕಟ್ಟಡ ಕೆಡವಿದಾಗ ಪುರಾತನ ದೇವಸ್ಥಾನದ ಕುರುಹುಗಳು ಪತ್ತೆಯಾಗಿವೆ. ಮೇಲ್ನೋಟಕ್ಕೆ ನೋಡಿದಾಗ ಪುರಾತನ ದೇವಸ್ಥಾನವನ್ನು ಕೆಡವಿ ಮಸೀದಿ ಕಟ್ಟಡ ಕಟ್ಟಿರುವುದು ಕಂಡುಬರುತ್ತದೆ ಎಂದು ವಿಶ್ವ ಹಿಂದೂ ಪರಿಷತ್‌ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ತಿಳಿಸಿದ್ದಾರೆ.

ಕಟ್ಟಡದ ಒಳಗೆ ಮತ್ತು ಹೊರಗಡೆ ನೋಡುವಾಗ ಪ್ರಾಚೀನ ದೇವಸ್ಥಾನದ ಕಟ್ಟಡದ ಶೈಲಿಯಲ್ಲಿ ಕಂಡು ಬರುತ್ತಿದೆ. ಗಂಜಿಮಠ ಗ್ರಾಮ ಪಂಚಾಯತಿ ನೀಡಿರುವ ಮಸೀದಿ ನವೀಕರಣದ ಅನುಮತಿಯನ್ನು ರದ್ದುಗೊಳಿಸಬೇಕು. ಆ ಸ್ಥಳದಲ್ಲಿರುವ ಕಟ್ಟಡವನ್ನು ಯಥಾಸ್ಥಿತಿಯಲ್ಲಿ ಕಾಪಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮತ್ತು ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಕಮಿಷನರ್ ಎನ್‌. ಶಶಿಕುಮಾರ್‌, ‘ಸ್ಥಳಕ್ಕೆ ಭೇಟಿ ನೀಡಿದ್ದು, ಅಲ್ಲಿನ ಜನರು ಮತ್ತು ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಲಾಗಿದೆ. ಸ್ಥಳದಲ್ಲಿ ಅಗತ್ಯ ಬಂದೋಬಸ್ತ್ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

‘ದಾಖಲೆ ಪರಿಶೀಲಿಸಿ ಸೂಕ್ತ ನಿರ್ಧಾರ’

ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಲು ಸೂಚಿಸಲಾಗಿದೆ. ಮಾಲೀಕತ್ವ ಸೇರಿದಂತೆ ಆ ಜಾಗದ ದಾಖಲೆಗಳನ್ನು ಪರಿಶೀಲಿಸಲಾಗುವುದು. ಧಾರ್ಮಿಕ ದತ್ತಿ ಇಲಾಖೆ ಹಾಗೂ ವಕ್ಫ್‌ ಮಂಡಳಿಯಿಂದ ವರದಿ ಪಡೆಯಲಾಗುವುದು. ದಾಖಲೆಗಳ ಕೂಲಂಕಷ ಪರಿಶೀಲನೆ ನಡೆಸಿ, ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

===

ಜಿಲ್ಲಾಡಳಿತದ ನಿರ್ಧಾರ ಆಗುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಜನರು ಯಾವುದೇ ತೀರ್ಮಾನಕ್ಕೆ ಬರಬಾರದು. ಶಾಂತಿ ಕಾಪಾಡಬೇಕು.
– ಡಾ.ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT