ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ: ಬಿಕ್ಕಟ್ಟು ಇತ್ಯರ್ಥಕ್ಕೆ ಸಮಿತಿ ರಚಿಸಲು ಸಂಪುಟ ಸಭೆಯಲ್ಲಿ ನಿರ್ಧಾರ

ಬಿಕ್ಕಟ್ಟು ಇತ್ಯರ್ಥಕ್ಕೆ ವರದಿ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ
Last Updated 3 ಮಾರ್ಚ್ 2021, 20:42 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ಬುಧವಾರ ನಡೆದ ಸಂಪುಟ ಸಭೆ ತೀರ್ಮಾನಿಸಿದೆ.

ತಮ್ಮನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕುರುಬ ಸಮುದಾಯ ಪಟ್ಟು ಹಿಡಿದಿತ್ತು. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿ ನೀಡಲು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರದ (ಮಾರ್ಚ್‌ 4) ಗಡುವು ನೀಡಿದ್ದರು.

ಎಸ್‌.ಟಿ ಸಮುದಾಯಗಳಿಗೆ ನೀಡಿರುವ ಮೀಸಲಾತಿ ಪ್ರಮಾಣವನ್ನು ಶೇ 7ಕ್ಕೆ ಹೆಚ್ಚಿಸುವಂತೆ ವಾಲ್ಮೀಕಿ ಸಮುದಾಯವೂ ಹೋರಾಟ ನಡೆಸುತ್ತಿದೆ. ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಹಲವು ಉಪ ಪಂಗಡಗಳು ತಮ್ಮನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ಬೇಡಿಕೆ ಇಟ್ಟಿವೆ. ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟಕ್ಕೆ ಸಜ್ಜಾಗುತ್ತಿದೆ.

ಮೀಸಲಾತಿಗಾಗಿ ಹಲವು ಸಮುದಾಯಗಳು ಏಕಕಾಲಕ್ಕೆ ಹೋರಾಟಕ್ಕೆ ಇಳಿದಿರುವುದರಿಂದ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಪಂಚಮಸಾಲಿ ಸಮುದಾಯದ ಹೋರಾಟ ದಿನ ಕಳೆದಂತೆ ರಾಜಕೀಯವಾಗಿಯೂ ಸರ್ಕಾರಕ್ಕೆ ಇರಿಸು–ಮುರಿಸು ಉಂಟು ಮಾಡುತ್ತಿದೆ. ಮೀಸಲಾತಿಗಾಗಿ ಹೋರಾಟಕ್ಕೆ ಇಳಿದಿರುವ ಎಲ್ಲ ಸಮುದಾಯಗಳನ್ನೂ ಸಮಾಧಾನಪಡಿಸಲು ಸರ್ಕಾರ ಮುಂದಾಗಿದೆ.

ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ‘ಮೀಸಲಾತಿ ಬೇಡಿಕೆಗಳ ವಿಚಾರದಲ್ಲಿ ಸಂವಿಧಾನ ಮತ್ತು ಕಾನೂನಿಗೆ ಸಂಬಂಧಿಸಿದ ಪ್ರಶ್ನೆಗಳೂ ಅಡಕವಾಗಿವೆ. ಈ ಎಲ್ಲ ಅಂಶಗಳನ್ನೂ ಪರಿಶೀಲಿಸಲು ತ್ರಿಸದಸ್ಯ ಸಮಿತಿ ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಅವರೊಂದಿಗೆ ಒಬ್ಬ ನಿವೃತ್ತ ಅಧಿಕಾರಿ ಮತ್ತು ಒಬ್ಬ ಸಮಾಜಶಾಸ್ತ್ರಜ್ಞ ಸಮಿತಿ ಸದಸ್ಯರಾಗಿರುತ್ತಾರೆ. ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯ ಅಧಿಕಾರವನ್ನು ಮುಖ್ಯಮಂತ್ರಿಯವರ ವಿವೇಚನೆಗೆ ಬಿಡುವ ನಿರ್ಧಾರವನ್ನು ಸಂಪುಟ ಕೈಗೊಂಡಿದೆ ಎಂದು ತಿಳಿಸಿದರು.

ಸಮಿತಿ ಮಾರ್ಗದರ್ಶನದಲ್ಲಿ ನಿರ್ಧಾರ: ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತು ಪರಿಶೀಲಿಸಿ, ವರದಿ ನೀಡುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಲಾಗಿದೆ. ಕುರುಬ ಸಮುದಾಯವನ್ನು ಎಸ್‌.ಟಿ ಪಟ್ಟಿಗೆ ಸೇರಿಸುವ ಬೇಡಿಕೆ ಕುರಿತು ಮೈಸೂರಿನ ಬುಡಕಟ್ಟುಗಳ ಅಧ್ಯಯನ ಸಂಸ್ಥೆಯ ಮೂಲಕ ಅಧ್ಯಯನ ನಡೆಯುತ್ತಿದೆ. ಎಸ್‌.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್. ನಾಗ‌ಮೋಹನದಾಸ್‌ ನೇತೃತ್ವದ ಸಮಿತಿ ವರದಿ ನೀಡಿದೆ. ಈ ಎಲ್ಲವನ್ನೂ ಪರಿಶೀಲಿಸಿ, ಮಾರ್ಗದರ್ಶನ ನೀಡುವ ಅಧಿಕಾರವನ್ನು ತ್ರಿಸದಸ್ಯ ಸಮಿತಿಗೆ ನೀಡಲಾಗುವುದು ಎಂದು ಸಚಿವರು ಹೇಳಿದರು.

ಶೇ 50ರ ಮಿತಿಯ ಕುರಿತು ಸಲಹೆ

ಶಿಕ್ಷಣ ಮತ್ತು ಉದ್ಯೋಗದಲ್ಲಿನ ಮೀಸಲಾತಿಯ ಪ್ರಮಾಣ ಶೇಕಡ 50ಕ್ಕೆ ಮೀರುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಸಂವಿಧಾನ ಪೀಠ ಇಂದಿರಾ ಸಾಹ್ನಿ ಪ್ರಕರಣದಲ್ಲಿ ತೀರ್ಪು ನೀಡಿದೆ. ಕೆಲವು ರಾಜ್ಯಗಳು ಶೇ 50ಕ್ಕಿಂತ ಹೆಚ್ಚಿನ ಮೀಸಲಾತಿ ನೀಡುವ ನಿರ್ಧಾರ ಕೈಗೊಂಡಾಗ ಸುಪ್ರೀಂಕೋರ್ಟ್‌ ತಡೆ ನೀಡಿರುವ, ತೀರ್ಮಾನ ರದ್ದು ಮಾಡಿರುವ ಉದಾಹರಣೆಗಳಿವೆ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಶೇ 50ರ ಮಿತಿಗೆ ಸಂಬಂಧಿಸಿದಂತೆಯೂ ಸರ್ಕಾರ ತ್ರಿಸದಸ್ಯ ಸಮಿತಿಯ ಸಲಹೆಯನ್ನು ಪಡೆಯಲಿದೆ. ಹಿಂದುಳಿದ ವರ್ಗಗಳ ಆಯೋಗದ ವರದಿ, ಕುಲಶಾಸ್ತ್ರೀಯ ಅಧ್ಯಯನ ವರದಿಗಳನ್ನೂ ಪರಿಶೀಲಿಸಿ ಸಲಹೆ ನೀಡುವಂತೆ ಕೋರಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT