ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಪರೀಕ್ಷೆ: ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯ ತಪ್ಪಿಸಿ– ರಿಜ್ವಾನ್‌

Last Updated 20 ಜನವರಿ 2022, 11:25 IST
ಅಕ್ಷರ ಗಾತ್ರ

ಬೆಂಗಳೂರು: ‘ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಇಂಗ್ಲಿಷ್‌ ಭಾಷಾಂತರವನ್ನು ಕಡ್ಡಾಯಗೊಳಿಸಿರುವುದರಿಂದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯ ಆಗುತ್ತಿದ್ದು, ಅದನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್‌ ಶಾಸಕ ರಿಜ್ವಾನ್‌ ಅರ್ಷದ್‌ ಪತ್ರ ಬರೆದಿದ್ದಾರೆ.

‘ಪಿಎಸ್‌ಐ ಪರೀಕ್ಷೆಯ ಪತ್ರಿಕೆ– 1ರಲ್ಲಿ ಕನ್ನಡದಲ್ಲಿರುವ ಸಾಲುಗಳನ್ನು ಇಂಗ್ಲಿಷ್‌ಗೆ ಮತ್ತು ಇಂಗ್ಲಿಷ್‌ ಸಾಲುಗಳನ್ನು ಕನ್ನಡಕ್ಕೆ ಅನುವಾದ ಮಾಡಬೇಕಿದೆ. ಇದರಿಂದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಲಿದೆ. ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಪ್ರಾಥಮಿಕ ಜ್ಞಾನ ಇರುತ್ತದೆಯೇ ಹೊರತು, ಇಂಗ್ಲಿಷ್‌ಗೆ ಅನುವಾದ ಮಾಡುವುದು ಕಷ್ಟ. ಹೀಗಾಗಿ ಅರ್ಹ ಅಭ್ಯರ್ಥಿಗಳು ಸ್ಪರ್ಧೆಯಿಂದ ಹಿಂದೆಬಿದ್ದ, ಸಮಾನ ಅವಕಾಶದಿಂದ ವಂಚಿತರಾಗುವ ಸಾಧ್ಯತೆ ಇದೆ’ ಎಂದೂ ಅವರು ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

‘ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಎಲ್ಲ ಅಭ್ಯರ್ಥಿಗಳಿಗೂ ಸಮಾನ ಅವಕಾಶ ಸಿಗುವಂತೆ ಖಾತರಿಪಡಿಸಬೇಕಾದುದು ಸರ್ಕಾರದ ಕರ್ತವ್ಯ. ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿಯೂ ಭಾಷೆಗೆ ಸಂಬಂಧಿಸಿದ ಪರೀಕ್ಷೆ ಅಥವಾ ಪ್ರಶ್ನೆಗಳು ಇದ್ದರೂ ಅವುಗಳನ್ನು ಅರ್ಹತಾ ಮಟ್ಟಕ್ಕೆ ಮಾತ್ರ ಪರಿಗಣಿಸಲಾಗುತ್ತದೆ. ಅದರ ಅಂಕಗಳನ್ನು ಅಂತಿಮ ಆಯ್ಕೆಗೆ ಪರಿಗಣಿಸುವುದಿಲ್ಲ. ಆದರೆ, ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ಮಾತ್ರ ಇಂಥ ತದ್ವಿರುದ್ಧ ನೀತಿ ಅನುಸರಿಸಲಾಗುತ್ತಿದೆ. ತಕ್ಷಣ ಈ ಬಗ್ಗೆ ಗಮನಹರಿಸಿ ಇಂಗ್ಲಿಷ್‌ ಅನುವಾದ ಪ್ರಶ್ನೆಯನ್ನು ಕೈಬಿಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು’ ಎಂದೂ ಅವರು ಪತ್ರದಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT