ಗುರುವಾರ , ಮೇ 26, 2022
29 °C

ಪಿಎಸ್‌ಐ ನೇಮಕಾತಿಯಲ್ಲಿ ₹ 300 ಕೋಟಿ ಭ್ರಷ್ಟಾಚಾರ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ ನೇಮಕಾತಿ ಅಕ್ರಮದಲ್ಲಿ ₹ 300 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ. ಮಂತ್ರಿಗಳು, ಅಧಿಕಾರಿಗಳು ಸೇರಿದಂತೆ ಸರ್ಕಾರವೇ ಈ ಹಗರಣದಲ್ಲಿ ಭಾಗಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ರಮದಲ್ಲಿ ಭಾಗಿಯಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.‌ಅಶ್ವತ್ಥ ನಾರಾಯಣ ಅವರನ್ನೂ ತಕ್ಷಣ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು.

ಅಕ್ರಮದ ಕುರಿತು ಕಾಟಾಚಾರದ ತನಿಖೆ ನಡೆಯುತ್ತಿದೆ. ನೇಮಕಾತಿ ಪ್ರಕ್ರಿಯೆಯ ನೇತೃತ್ವ ವಹಿಸಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಮತ್ತು ಅದೇ ವಿಭಾಗದಲ್ಲಿದ್ದ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ವಿರುದ್ಧವೂ ಎಫ್‌ಐಆರ್‌ ದಾಖಲಿಸಿ, ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಸಚಿವ ಅಶ್ವತ್ಥ ನಾರಾಯಣ ಸಂಬಂಧಿಗಳಾದ ದರ್ಶನ್ ಗೌಡ ಮತ್ತು ನಾಗೇಶ್ ಎಂಬ ಅಭ್ಯರ್ಥಿಗಳು ಅಕ್ರಮವಾಗಿ ಪಿಎಸ್ಐ ಹುದ್ದೆಗೆ ಆಯ್ಕೆಯಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ವಿಚಾರಣೆಗೆ ಕರೆತಂದಿದ್ದ ಅವರನ್ನು ಸಚಿವರು ಪ್ರಭಾವ ಬೀರಿ ಬಿಡಿಸಿರುವ ಆರೋಪವಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲೂ ಅಕ್ರಮ ನಡೆದಿದೆ. ಕುಲ ಸಚಿವರಾಗಿದ್ದ ನಾಗರಾಜ್ ಎಂಬುವವರನ್ನು ಬಂಧಿಸಲಾಗಿದೆ. ಇಲಾಖೆಯ ಜವಾಬ್ದಾರಿ ಹೊತ್ತಿರುವ ಅಶ್ವತ್ಥ ನಾರಾಯಣ ಶಾಮೀಲಾಗದೆ ಅಕ್ರಮ ನಡೆಯಲು ಸಾಧ್ಯವೆ? ಎಂದು ಕೇಳಿದರು.

ಈ ಎರಡೂ ಅಕ್ರಮಗಳ ಕುರಿತು ಹೈಕೋರ್ಟ್ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಶಾಸಕ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕಾಂಗ್ರೆಸ್ ಮುಖಂಡರಾದ ವಿ.ಎಸ್. ಉಗ್ರಪ್ಪ, ಎಚ್.ಎಂ. ರೇವಣ್ಣ, ಎಂ. ನಾರಾಯಣಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು