ಕಲಬುರ್ಗಿ: ‘ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ಭಾಗದ ಜಿಲ್ಲೆಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಅಂದಾಜು ₹ 3 ಸಾವಿರ ಕೋಟಿ ಮೀಸಲಿಡಲಾಗಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಪ‍್ರದೇಶ ಅಭಿವೃದ್ಧಿ ಮಂಡಳಿಗೆ ₹ 1500 ಕೋಟಿ ಹಂಚಿಕೆ ಮಾಡಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ನಗರದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊರೊನಾ ಮೊದಲ ಅಲೆ ಹಾಗೂ ಎರಡನೇ ಅಲೆಯಿಂದಾಗಿ ತೆರಿಗೆ ಸಂಗ್ರಹ ಕಡಿಮೆಯಾಯಿತು. ಒಂದು ರೂಪಾಯಿ ತೆರಿಗೆ ಸಂಗ್ರಹವಾಗದೇ ಸರ್ಕಾರಿ ನೌಕರರಿಗೆ ಸಂಬಳ ಪಾವತಿ ಮಾಡಲಾಗದ ಪರಿಸ್ಥಿತಿಯಲ್ಲಿಯೂ ನಾವು ಅಭಿವೃದ್ಧಿಯನ್ನು ಮರೆಯಲಿಲ್ಲ’ ಎಂದರು.
‘ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ ₹ 18,331 ಕೋಟಿ, ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ₹ 7,473 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಸತಿ ನಿಲಯಗಳ ನಿರ್ಮಾಣ ಹಾಗೂ ನಿರ್ವಹಣೆಗಾಗಿ ₹ 3,200 ಕೋಟಿ ಹಾಗೂ ಪರಿಶಿಷ್ಟ ಪಂಗಡದವರಿಗೆ ₹ 1,270 ಕೋಟಿ ಹಣ ನೀಡಲಾಗಿದೆ’ ಎಂದರು.
‘ಬಸವಣ್ಣನವರ ಕರ್ಮಭೂಮಿ ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿ ಹಾಗೂ ಅನುಭವ ಮಂಟಪ ನಿರ್ಮಾಣಕ್ಕಾಗಿ ₹ 500 ಕೋಟಿ ಮೀಸಲಿಟ್ಟು, ಈಗಾಗಲೇ ₹ 200 ಕೋಟಿ ಬಿಡುಗಡೆ ಮಾಡಲಾಗಿದೆ. ನಾವು ಬರೀ ಹೆಸರು ಬದಲು ಮಾಡಲಿಲ್ಲ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಹಣವನ್ನೂ ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಹೇಳಿದರು.
--
ಕೊರೊನಾ ಇನ್ನೂ ಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ಸದ್ಯಕ್ಕೆ ನಡೆಸುವುದಿಲ್ಲ
–ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.