ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸದಿದ್ದರೆ ಉಪವಾಸ ಸತ್ಯಾಗ್ರಹ, ಪಾದಯಾತ್ರೆಯ ಮೂಲಕ ಹೋರಾಟ ಆರಂಭಿಸುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪರಿಷತ್‌ನಲ್ಲಿ ಬುಧವಾರ ನಿಯಮ 68ರ ಅಡಿಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಕೃಷ್ಣಾ ಮೇಲ್ದಂಡೆ ಯೋಜನೆಯ ಮೊದಲ ಮತ್ತು ಎರಡನೇ ಹಂತದ ಕಾಮಗಾರಿಗಳಿಗೆ ಹೋಲಿಸಿದರೆ ಬಾಕಿ ಉಳಿದಿರುವುದು ಅತ್ಯಲ್ಪ. ತೆಲಂಗಾಣ ಸರ್ಕಾರ ಕಾಳೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ ಮಾದರಿಯಲ್ಲಿ ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು’ ಎಂದು ಆಗ್ರಹಿಸಿದರು.
ಕೃಷ್ಣಾ ಭಾಗ್ಯ ಜಲ ನಿಗಮದ 855 ಹುದ್ದೆಗಳ ಪೈಕಿ 460 ಖಾಲಿ ಇವೆ. ಅವುಗಳನ್ನು ಭರ್ತಿ ಮಾಡದೇ ಇದ್ದರೆ ಯೋಜನೆ ಅನುಷ್ಠಾನ ಕಷ್ಟ. ಈ ಕಾಮಗಾರಿಗೆ ಅಗತ್ಯವಿರುವ ₹ 65,000 ಕೋಟಿ ಅನುದಾನವನ್ನು ಒಂದೇ ಬಾರಿಗೆ ಒದಗಿಸಲು ಸರ್ಕಾರ ಪ್ರಯತ್ನಿಸಬೇಕು ಎಂದರು.
ಕೃಷ್ಣಾ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದ ವ್ಯಾಜ್ಯ ಸುಪ್ರೀಂಕೋರ್ಟ್‌ನಲ್ಲಿ ಇನ್ನೂ ಬಾಕಿ ಇದೆ. ತೆಲಂಗಾಣ ಮತ್ತು ಆಂಧ್ರಪ್ರದೇಶಗಳ ನಡುವಿನ ವ್ಯಾಜ್ಯದಿಂದ ಕರ್ನಾಟಕದ ಯೋಜನೆಗೆ ಅಡ್ಡಿ ಆಗಬಾರದು. ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟು ಕೃಷ್ಣಾ ಜಲ ನ್ಯಾಯಾಧೀಕರಣದ ಅಂತಿಮ ತೀರ್ಪಿನ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದರು.
‘ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳದಿದ್ದರೆ ನಾವು ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ಆಮರಣ ಉಪವಾಸಕ್ಕೂ ಸಿದ್ಧ. ಪಾದಯಾತ್ರೆಯನ್ನೂ ಮಾಡುತ್ತೇವೆ’ ಎಂದರು.
ಜೆಡಿಎಸ್‌ನ ತಿಪ್ಪೇಸ್ವಾಮಿ ಮಾತನಾಡಿ, ‘ಕೃಷ್ಣಾ ನದಿ ನೀರಿನ ಬಳಕೆಗೆ ರೂಪಿಸಿರುವ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರದ ಮೇಲೆ ಪ್ರಬಲವಾಗಿ ಒತ್ತಡ ಹೇರಬೇಕು’ ಎಂದು ಸಲಹೆ ನೀಡಿದರು.
‘ಆಲಮಟ್ಟಿ ಜಲಾಶಯದ ನಿರ್ವಹಣೆಯಲ್ಲಿ ಸಮಸ್ಯೆ ಇದೆ. ಇದರಿಂದಾಗಿ ನದಿಪಾತ್ರದ ರೈತರು ಪ್ರವಾಹದಿಂದ ಬೆಳೆ ಕಳೆದುಕೊಳ್ಳುತ್ತಿದ್ದಾರೆ. ಅಣೆಕಟ್ಟೆಯ ಪ್ರವಾಹದಲ್ಲಿ ಬಾಧಿತರಾದವರನ್ನೂ ಯೋಜನಾ ಬಾಧಿತರೆಂದು ಪರಿಗಣಿಸಿ ಪರಿಹಾರ ನೀಡಬೇಕು’ ಎಂದು ಕಾಂಗ್ರೆಸ್‌ನ ಆರ್.ಬಿ. ತಿಮ್ಮಾಪೂರ ಆಗ್ರಹಿಸಿದರು.
ಕಾಂಗ್ರೆಸ್‌ನ ಪ್ರಕಾಶ್ ರಾಥೋಡ್, ಬಸವರಾಜ ಪಾಟೀಲ ಇಟಗಿ ಕೂಡ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿ ತ್ವರಿತವಾಗಿ ಆರಂಭಿಸುವಂತೆ ಒತ್ತಾಯಿಸಿದರು.
‘ಪೂರ್ಣ ನೀರಿನ ಬಳಕೆಗೆ ಬದ್ಧ’
ಬೆಂಗಳೂರು: ‘ಅಂತರರಾಜ್ಯ ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕದ ಪಾಲಿನ ನೀರು ಬಳಕೆ ಮಾಡಿಕೊಳ್ಳಲು ಎಲ್ಲ ಕ್ರಮಕೈಗೊಳ್ಳಲು ಸರ್ಕಾರ ಬದ್ಧವಾಗಿದೆ’ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ ವಿಳಂಬದ ಬಗ್ಗೆ ವಿಧಾನ ಪರಿಷತ್‌ನಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಅವರು, ‘ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಭರವಸೆ ನೀಡಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ 3ರಡಿ 2013ರಿಂದ ಇಲ್ಲಿಯವರೆಗೆ ಮಾಡಲಾದ ವೆಚ್ಚದ ವಿವರಗಳನ್ನು ನೀಡಿದ ಸಚಿವರು, ‘2013 ರಿಂದ 2018ರವರೆಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ₹ 7,728.80 ಕೋಟಿ ಮಾತ್ರ ವೆಚ್ಚ ಮಾಡಲಾಗಿದೆ. 2018ರಿಂದ 2019ರ ಜುಲೈವರೆಗಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ₹ 1,295.50 ಕೋಟಿ ವೆಚ್ಚ ಮಾಡಲಾಗಿದೆ. ಜುಲೈ 2019ರಿಂದ ಪ್ರಸಕ್ತ ಸರ್ಕಾರದ ಅವಧಿಯಲ್ಲಿ ₹ 3,326.70 ಕೋಟಿ ವೆಚ್ಚ ಮಾಡಲಾಗಿದೆ’ ಎಂದು ವಿವರಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಒಂದು ಸವಾಲಾಗಿದೆ. 2013ರ ಹೊಸ ಭೂಸ್ವಾಧೀನ ಕಾಯ್ದೆಯಿಂದ ಪರಿಹಾರದ ಮೊತ್ತ ಹೆಚ್ಚಾಗಿದೆ. 1,34,000 ಎಕರೆ ಭೂಮಿ ಭೂಸ್ವಾಧೀನವಾಗಬೇಕಾಗಿದೆ. ಇದರಿಂದಾಗಿ ಒಟ್ಟು 78,000 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ತಿಳಿಸಿದರು.
‘ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳುವ ಸಂದರ್ಭದಲ್ಲಿ ಒಬ್ಬರೇ ಒಬ್ಬರು ಸಂತ್ರಸ್ತರು ಉಳಿಯಬಾರದು ಎಂಬ ಪ್ರಾಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಕೃಷ್ಣಾ ಮೇಲ್ದಂಡೆ ಯೋಜನೆಗೆ ವಾರ್ಷಿಕ ₹ 10 ಸಾವಿರ ಕೋಟಿ ಖರ್ಚು ಮಾಡುವುದಾಗಿ ಅಂದಿನ ನೀರಾವರಿ ಸಚಿವರು ಘೋಷಿಸಿದ್ದರು. ಆದರೆ ಕೇವಲ ₹ 7,728.80 ಕೋಟಿ ಮಾತ್ರ ವೆಚ್ಚ ಮಾಡಲಾಗಿದೆ’ ಎಂದು ಸಚಿವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.