ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಸೂಕ್ತ: ಎಸ್‌. ಸುರೇಶ್ ಕುಮಾರ್

Last Updated 23 ಮೇ 2021, 20:23 IST
ಅಕ್ಷರ ಗಾತ್ರ

ಬೆಂಗಳೂರು: ‘ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಒಳ್ಳೆಯದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಹೇಳಿದರು.

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ‘ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾ
ದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸೂಕ್ತ‘ ಎಂದು ಪ್ರತಿಪಾದಿಸಿದರು.

‘ಕರ್ನಾಟಕದಲ್ಲಿ ಎರಡನೇ ಅಲೆ ನಿಯಂತ್ರಣಕ್ಕೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಪರೀಕ್ಷೆಗಳ ದಿನಾಂಕ ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಹೊಸತಾಗಿ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಕೂಡಾ ಸರ್ಕಾರವು ಯೋಜಿಸಿದೆ’ ಎಂದು ಭಾನುವಾರ ತಿಳಿಸಿದರು.

‘ಕರ್ನಾಟಕದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದರೆ ಆಗಸ್ಟ್‌ನಲ್ಲಿ ಫಲಿತಾಂಶ ಘೋಷಿಸಬಹುದು. ನೀಟ್, ಜೆಇಇ, ಸಿಇಟಿ, ಐಸಿಎಆರ್ ಅಂಥ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ತಿಂಗಳ ಸೂಕ್ತ ದಿನಾಂಕಗಳಂದು ಆಯೋಜಿಸಬಹುದು’ ಎಂದು ಸುರೇಶ್ ಕುಮಾರ್ ಸಲಹೆ ನೀಡಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳ್ಳಬೇಕೆಂದು ಸಭೆಯಲ್ಲಿ ಹಲವರು ಪ್ರತಿಪಾದಿಸಿದರು. ಸರಳೀಕೃತ ಮಾದರಿಯಲ್ಲಿ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲು 45 ದಿನಗಳ ಕಾಲಾವಕಾಶ ಅಗತ್ಯವಿದೆ. ಕಡಿಮೆ ಅವಧಿಯ ಪರೀಕ್ಷೆಗಳನ್ನು ನಡೆಸುವ ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಸಲಹೆ ನೀಡಿದೆ ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT