ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯದಲ್ಲಿ ದೆಹಲಿ ಮಾದರಿ ಹೋರಾಟಕ್ಕೆ ಚಿಂತನೆ’-ಜಿ.ಸಿ.ಬಯ್ಯಾರೆಡ್ಡಿ

Last Updated 19 ಮಾರ್ಚ್ 2021, 20:25 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ರಾಜ್ಯದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲು ಚಿಂತಿಸಲಾಗಿದೆ’ ಎಂದು ಸಂಯುಕ್ತ ಹೋರಾಟ–ಕರ್ನಾಟಕದ ಸಂಯೋಜಕ ಜಿ.ಸಿ.ಬಯ್ಯಾರೆಡ್ಡಿ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ದೇಶದಲ್ಲಿ ರೈತರು ಮತ್ತು ಬಡವರು ಹಿಂದೆಂದಿಗಿಂತಲೂ ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋವಿಡ್‌ನಿಂದಾಗಿ ಇಡೀ ದೇಶವೇ ತತ್ತರಿಸಿದ್ದ ಸಮಯದಲ್ಲಿ ಸರ್ಕಾರವು ಜನರ ಕಷ್ಟಗಳಿಗೆ ಸ್ಪಂದಿಸಲಿಲ್ಲ. ಬದಲಾಗಿ ಅವರ ಸಂಕಷ್ಟ ಹೆಚ್ಚಿಸುವಂತಹ ನೀತಿಗಳನ್ನು ಜಾರಿಗೊಳಿಸಿದೆ. ಸರ್ಕಾರದ ಈ ಧೋರಣೆಯನ್ನು ಖಂಡಿಸಿ ಇದೇ 22ರಂದು ವಿಧಾನಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದರು.

‘22ರ ಬೆಳಿಗ್ಗೆ ನಗರ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಬೃಹತ್‌ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದೆಹಲಿಯ ರೈತ ಹೋರಾಟದ ರೂವಾರಿಗಳಾದ ರಾಕೇಶ್‌ ಸಿಂಗ್‌ ಟಿಕಾಯತ್‌, ದರ್ಶನ್‌ ಪಾಲ್‌ ಸಿಂಗ್‌, ಯದುವೀರ್‌ ಸಿಂಗ್‌ ಭಾಗವಹಿಸಲಿದ್ದಾರೆ. ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಜರಿರಲಿದ್ದಾರೆ. 25 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

ಬಡಗಲಪುರ ನಾಗೇಂದ್ರ ‘ಕೇಂದ್ರವು ವಿದ್ಯುತ್‌ ಮಸೂದೆಯ ಮೂಲಕ ವಿದ್ಯುತ್‌ ವಲಯವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಲು ಹೊರಟಿದೆ. ಕೃಷಿ ಪಂಪ್‌ಸೆಟ್‌, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಬ್ಸಿಡಿಗಳನ್ನು ತೆಗೆದುಹಾಕುವ ಹುನ್ನಾರವೂ ಇದರಲ್ಲಿ ಅಡಗಿದೆ. ಇದನ್ನು ರಾಜ್ಯ ಸರ್ಕಾರ ವಿರೋಧಿಸಬೇಕು’ ಎಂದರು.

‘ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಶಾಸನಬದ್ಧಗೊಳಿಸಬೇಕು. ಜೊತೆಗೆ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯ
ಬೇಕು’ ಎಂದು ಒತ್ತಾಯಿಸಿದರು.

‘ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದ ಕಾವು ಈಗ ದೇಶದೆಲ್ಲೆಡೆ ವ್ಯಾಪಿಸುತ್ತಿದೆ. ಇದೇ 22ರಂದು ನಿಗದಿಯಾಗಿರುವ ಹೋರಾಟದಲ್ಲಿ ಮಹಿಳೆಯರು, ಕಾರ್ಮಿಕರು, ಆದಿವಾಸಿ ಮತ್ತು ದಲಿತ ಸಮುದಾಯಗಳ ಜನರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದ ನಂತರ ಮುಂದಿನ ಹೋರಾಟದ ರೂಪುರೇಷೆ ತಯಾರಿಸಲಿದ್ದೇವೆ’ ಎಂದು ನೂರ್‌ ಶ್ರೀಧರ್‌ ಹೇಳಿದರು.

ರೈತ ಮುಖಂಡ ಭೈರೇಗೌಡ, ಗೋಪಾಲ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT