ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 2019ರಿಂದ 2021ರ ಅವಧಿಯಲ್ಲಿ ರಾಜ್ಯದ ನ್ಯಾಯಾಲಯಗಳಲ್ಲಿ ವಿಲೇವಾರಿಯಾಗಿರುವ ಪ್ರಕರಣಗಳಲ್ಲಿ ಸರಾಸರಿ ಶೇಕಡ 8ರಷ್ಟು ಮೊಕದ್ದಮೆಗಳಲ್ಲಿ ಮಾತ್ರ ಅಪರಾಧ ಸಾಬೀತಾಗಿದೆ!
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಪ್ರಶ್ನೆಗೆ ಶುಕ್ರವಾರ ಉತ್ತರ ನೀಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಮಾಹಿತಿ ನೀಡಿದರು. 2019 ಮತ್ತು 2021ರಲ್ಲಿ ತಲಾ ಶೇ 7ರಷ್ಟು ಪ್ರಕರಣಗಳಲ್ಲಿ ಅಪರಾಧ ಸಾಬೀತಾಗಿದೆ. 2020ರಲ್ಲಿ ಈ ಪ್ರಮಾಣ ಶೇ 10ರಷ್ಟಿತ್ತು.
2019ರ ಆರಂಭದಲ್ಲಿ 5,434 ಪ್ರಕರಣಗಳು ಬಾಕಿ ಇದ್ದವು. ಮೂರು ವರ್ಷಗಳ ಅವಧಿಯಲ್ಲಿ ವಿವಿಧ ನ್ಯಾಯಾಲಯಗಳಲ್ಲಿ 4,038 ಪ್ರಕರಣಗಳು ವಿಲೇವಾರಿಯಾಗಿವೆ. 2021ರ ಅಂತ್ಯದಲ್ಲಿ 6,834 ಪ್ರಕರಣಗಳು ಬಾಕಿ ಉಳಿದಿದ್ದವು ಎಂದು ತಿಳಿಸಿದರು.
‘ವಿಲೇವಾರಿಯಾದ ಪ್ರಕರಣಗಳಲ್ಲಿ ಶೇ 7ರಿಂದ 8ರಷ್ಟರಲ್ಲಿ ಮಾತ್ರ ಶಿಕ್ಷೆ ಆಗುವುದಾದರೆ ದೌರ್ಜನ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಹೇಗೆ ನ್ಯಾಯ ಸಿಗುತ್ತದೆ. ಹೆಚ್ಚಿನ ಪ್ರಕರಣಗಳಲ್ಲಿನ ಶಿಕ್ಷೆಯಾಗುವಂತೆ ಮಾಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ವೆಂಕಟೇಶ್ ಆಗ್ರಹಿಸಿದರು.
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳ ತನಿಖೆಯ ಮೇಲೆ ನಿಗಾ ಇಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೂರು ತಿಂಗಳಿಗೊಮ್ಮೆ ಪರಿಶೀಲನಾ ಸಭೆ ನಡೆಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರೂ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ’ ಎಂದು ಸಚಿವರು ತಿಳಿಸಿದರು.
ದೌರ್ಜನ್ಯಕ್ಕೊಳಗಾಗಿ ಮೃತಪಟ್ಟವರಲ್ಲಿ 99 ಜನರ ಕುಟುಂಬದ ಸದಸ್ಯರಿಗೆ ಸರ್ಕಾರದಿಂದ ಉದ್ಯೋಗ ನೀಡಲಾಗಿದೆ. 148 ಪ್ರಕರಣಗಳಲ್ಲಿ ಉದ್ಯೋಗ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.