ಕೊರೊನಾ ದುಗುಡದೊಂದಿಗೆ ರಾಜ್ಯದಾದ್ಯಂತ ಶಾಲೆಗೆ ಹೊರಟರು ವಿದ್ಯಾರ್ಥಿಗಳು

ಬೆಂಗಳೂರು: ಕೋವಿಡ್–19 ಭೀತಿಯ ನಡುವೆಯೂ ಇಂದಿನಿಂದ ಶಾಲಾ, ಕಾಲೇಜುಗಳು ಆರಂಭವಾಗಿದ್ದು ರಾಜ್ಯದಾದ್ಯಂತ ಮಕ್ಕಳು ಕೊರೊನಾವೈರಸ್ ದುಗುಡದೊಂದಿಗೆ ಶಾಲೆ, ಕಾಲೇಜುಗಳತ್ತ ಮುಖಮಾಡಿದ್ದಾರೆ.
ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಮಾತ್ರವಲ್ಲದೆ ಆತಂಕ ಇರುವ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಬೇಡ. ಆನ್‌ಲೈನ್ ಮೂಲಕವೇ ಪಾಠ ಕೇಳುವ ಅವಕಾಶ ಕಲ್ಪಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಆರೋಗ್ಯ ಸಮಸ್ಯೆಗಳಿರುವ ಮಕ್ಕಳು ಶಾಲೆಗೆ ಬರದಂತೆ ಸೂಚನೆ ನೀಡಲಾಗಿದೆ. ಜೊತೆಗೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸುವ ಬಗ್ಗೆಯೂ ಜಾಗೃತಿ ಮೂಡಿಸಲಾಗಿದೆ.
ಪ್ರತಿ ಜಿಲ್ಲೆಯಲ್ಲಿ ವಿಚಕ್ಷಣ ದಳ
‘ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಲು ಪ್ರತಿ ಜಿಲ್ಲೆಯಲ್ಲಿ ವಿಚಕ್ಷಣ ದಳ ರಚಿಸಲು ನಿರ್ಧರಿಸಲಾಗಿದೆ’ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ತಂಡವು ಆಯಾ ಜಿಲ್ಲಾ ವ್ಯಾಪ್ತಿಯ ಶಾಲೆಗಳಿಗೆ ಆಗಾಗ ಭೇಟಿ ನೀಡಿ ಪರಿಶೀಲಿಸಲಿದೆ. ಏನಾದರೂ ಕೊರತೆ, ಸಮಸ್ಯೆ ಇದ್ದಲ್ಲಿ ಅದನ್ನು ಸರಿಪಡಿಸುವ ಕೆಲಸವನ್ನೂ ಮಾಡಲಿದೆ’ ಎಂದಿದ್ದಾರೆ.
ಶಾಲೆಗೆ ಹೊರಟ್ಟಿ, ಅಬ್ಬಯ್ಯ ಭೇಟಿ
ಹುಬ್ಬಳ್ಳಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶುಕ್ರವಾರ ತರಗತಿ ಆರಂಭವಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮತ್ತು ಶಾಸಕ ಪ್ರಸಾದ ಅಬ್ಬಯ್ಯ ಅವರು, ಹುಬ್ಬಳ್ಳಿಯ ಪೆಂಡಾರಗಲ್ಲಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜತೆ ಮಾತನಾಡಿದರು.
ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಂಡು ತರಗತಿ ಆರಂಭಿಸಲಾಗಿದೆ. ಅರ್ಧದಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಮಾತ್ರ ಮೊದಲ ದಿನದ ತರಗತಿಗಳಿಗೆ ಹಾಜರಾಗಿದ್ದಾರೆ. ತರಗತಿಯಲ್ಲಿ ಪರಸ್ಪರ ಅಂತರ ಕಾಯ್ದುಕೊಂಡು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಶಾಲೆ ಪ್ರವೇಶ ದ್ವಾರದಲ್ಲಿ ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ ಒಳಕ್ಕೆ ಬಿಡಲಾಯಿತು.
ತರಗತಿಗಳಲ್ಲಿ ಕೈಗೊಂಡಿರುವ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.