ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಜಾರಕಿಹೊಳಿಗೆ ಕೋವಿಡ್ ದೃಢ ಎಂದ ಭೈರತಿ

Last Updated 5 ಏಪ್ರಿಲ್ 2021, 6:19 IST
ಅಕ್ಷರ ಗಾತ್ರ

ಬೆಳಗಾವಿ: ‘ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ವಿಷಯವನ್ನು ಅವರೇ ನನಗೆ ತಿಳಿಸಿದ್ದಾರೆ’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗುಣಮುಖವಾದ ನಂತರ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದಾರೆ’ ಎಂದು ಹೇಳಿದರು.

‘ಅವರು ಬೆಂಗಳೂರಿನಲ್ಲೇ ಇದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಹೋದರ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಇನ್ನೆರಡು ದಿನಗಳಲ್ಲಿ ಪ್ರಚಾರಕ್ಕೆ ಬರುತ್ತಾರೆ. ರಮೇಶ ಹಾಗೂ ಬಾಲಚಂದ್ರ ಜೊತೆ ಪ್ರಚಾರದ ವಿಷಯವನ್ನಷ್ಟೆ ಮೊಬೈಲ್ ಫೋನ್‌ ಮೂಲಕ ಮಾತನಾಡಿದ್ದೇನೆ’ ಎಂದರು.

‘ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವುದು ಆಂತರಿಕ ವಿಚಾರ. ಮುಖ್ಯಮಂತ್ರಿ, ಈಶ್ವರಪ್ಪ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಕಾಗಿನೆಲೆ ಕನಕ ಗುರುಪೀಠದ ಹರಿಹರ ಬೆಳ್ಳೂಡಿ ಶಾಖಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದರು. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ’ ಎಂದು ಸಮರ್ಥಿಸಿಕೊಂಡರು.

‘ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಈ ಸರ್ಕಾರ ಹೋಗಬೇಕು ಮತ್ತು ಮರು ದಿನವೇ ಮುಖ್ಯಮಂತ್ರಿ ಆಗಬೇಕು ಎಂಬ ತವಕದಲ್ಲಿ ಇದ್ದಾರೆ. ಆದರೆ, ಅವರ ಆ ಕನಸು ನನಸಾಗುವುದಿಲ್ಲ. ಮುಂದಿನ ಬಾರಿಯೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವೇ ಇಲ್ಲ. ಅವರು ಹಾಗೂ ಡಿ.ಕೆ. ಶಿವಕುಮಾರ್‌ ನಡುವೆಯೇ ಬಹಳಷ್ಟು ಹೋರಾಟ ನಡೆಯುತ್ತಿದೆ’ ಎಂದು ಟೀಕಿಸಿದರು.

‘ರಮೇಶ ಅವರಿಗೆ ಕೋವಿಡ್ ದೃಢಪಟ್ಟಿರುವ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT