ಲೈಂಗಿಕ ಕಿರುಕುಳ ಆರೋಪ: ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ನ.14ರವರೆಗೆ ವಿಸ್ತರಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ನ್ಯಾಯಾಂಗ ಬಂಧನದ ಅವಧಿ ಮುಗಿದಿದ್ದರಿಂದ ಆರೋಪಿಗಳಾದ ಶಿವಮೂರ್ತಿ ಮುರುಘಾ ಶರಣರು, ಹಾಸ್ಟೆಲ್‌ನ ಮಹಿಳಾ ವಾರ್ಡನ್ ಹಾಗೂ ಪರಮಶಿವಯ್ಯ ಅವರನ್ನು ಎರಡನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ. ಕೋಮಲಾ, ಶಿವಮೂರ್ತಿ ಮುರುಘಾ ಶರಣರು ಹಾಗೂ ಪರಮಶಿವಯ್ಯ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಆರು ದಿನಗಳ ಕಾಲ ವಿಸ್ತರಿಸಿದರು.
ಎರಡನೇ ಪೋಕ್ಸೊ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಯಾದ ಹಾಸ್ಟೆಲ್‌ನ ಮಹಿಳಾ ವಾರ್ಡನ್ ಅವರನ್ನು ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಕೋರಿದ ಹಿನ್ನೆಲೆಯಲ್ಲಿ, ನ.10ರ ಮಧ್ಯಾಹ್ನ 1 ಗಂಟೆಯವರೆಗೆ ಅವರನ್ನು ಪೊಲೀಸ್ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದರು.
ತನಿಖಾಧಿಕಾರಿ ಬಾಲಚಂದ್ರ ನಾಯ್ಕ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿತು.
ಮುರುಘಾ ಮಠಕ್ಕೆ ಆಡಳಿತಾಧಿಕಾರಿ: ವರದಿ ಆಧರಿಸಿ ತೀರ್ಮಾನ’
ಹೊಸದುರ್ಗ (ಚಿತ್ರದುರ್ಗ): ಮುರುಘಾ ಮಠದ ಆಡಳಿತ ವೈಖರಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಚಿತ್ರದುರ್ಗದ ಜಿಲ್ಲಾಧಿಕಾರಿಯಿಂದ ವರದಿ ಕೇಳಿದೆ. ಸರ್ಕಾರ ವರದಿ ಆಧರಿಸಿ ಆಡಳಿತಾಧಿಕಾರಿ ನೇಮಕ ಕುರಿತು ಶೀಘ್ರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
‘ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರಕ್ಕೆ ಅರ್ಜಿ ಸಲ್ಲಿಕೆಯಾಗಿದೆ. ಮಠದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸಾಕಷ್ಟು ವರದಿಗಳು ಪ್ರಸಾರವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ವಸ್ತುನಿಷ್ಠ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಶರಣರದ್ದು ಅಕ್ಷಮ್ಯ ಅಪರಾಧ: ಯಡಿಯೂರಪ್ಪ
ಉಡುಪಿ: ‘ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅಕ್ಷಮ್ಯ ಅಪರಾಧ ಮಾಡಿದ್ದಾರೆ’ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮಂಗಳವಾರ ಆದಿ ಉಡುಪಿ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, ‘ಮುರುಘಾ ಶರಣರು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಕಾನೂನಿನ ಪ್ರಕಾರ ತಕ್ಕ ಶಿಕ್ಷೆಯಾಗಬೇಕು’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.